varthabharthi

ಬೆಂಗಳೂರು

ದೀಪಾವಳಿ ಪ್ರಯುಕ್ತ ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

ವಾರ್ತಾ ಭಾರತಿ : 12 Oct, 2017

ಬೆಂಗಳೂರು, ಅ.12: ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅ.17 ರಿಂದ 19 ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ವಿಶೇಷ ಹೆಚ್ಚುವರಿ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲು ಕೆಎಸ್ಸಾರ್ಟಿಸಿ ಮುಂದಾಗಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ಪಾವಗಡ, ಹೊಸದುರ್ಗ ಮುಂತಾದ ಸ್ಥಳಗಳಿಗೆ ಕೆಎಸ್ಸಾರ್ಟಿಸಿ ಬಸ್ ವಿಶೇಷ ಕಾರ್ಯಾಚರಣೆ ಮಾಡಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಹಾಗೂ ತಮಿಳುನಾಡು ಮತ್ತು ಆಂಧ್ರ ಪ್ರದೇಶ ಕಡೆಗೆ(ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್) ಹೋಗುವ ಸಾರಿಗೆ ಬಸ್‌ಗಳು ಶಾಂತಿನಗರ ಬಸ್ ನಿಲ್ದಾಣದಿಂದ ಕಾರ್ಯಾಚರಿಸುತ್ತವೆ.

ಬೆಂಗಳೂರು ನಗರದ ಜಯನಗರ, ಜೆ.ಪಿ.ನಗರ, ಜಯನಗರ 4ನೆ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೆ ಅಡ್ಡ ರಸ್ತೆ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಹ್ಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ ಅಥವಾ ಪಿಕ್‌ಅಪ್ ಪಾಯಿಂಟ್‌ನ ಗಮನಿಸಬೇಕಾಗಿರುತ್ತದೆ. www.ksrtc.in ವೆಬ್‌ಸೈಟ್ ಮೂಲಕ ಈ ಟಿಕೆಟನ್ನು ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಬೆಂಗಳೂರು ನಗರದ 148, ಮೈಸೂರು ನಗರದ 18 ಹಾಗೂ ಮಂಗಳೂರಿನ 34 ಹಾಗೂ ರಾಜ್ಯದ ಇತರೆ ಸ್ಥಳಗಳಲ್ಲಿರುವ 230 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಿಕೊಳ್ಳಬಹುದು. ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಒಟ್ಟಾಗಿ ಬುಕ್ ಮಾಡಿದರೆ ಶೇ.5 ರಷ್ಟು ರಿಯಾಯಿತಿ ನೀಡಲಾಗುತ್ತದೆ. ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರ, ತೆಲಂಗಾಣ, ಕೇರಳ, ಗೋವಾದಲ್ಲಿನ ಪ್ರಮುಖ ನಗರಗಳಲ್ಲಿ ಬುಕ್ಕಿಂಗ್ ಕೌಂಟರ್ ತೆರೆಯಲಾಗಿದೆ.

 

Comments (Click here to Expand)