ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವಿರೋಧ ಆಯ್ಕೆ
ಹೊಸದಿಲ್ಲಿ, ಡಿ.11: ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವಿರೋಧವಾಗಿ ಇಂದು ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷತೆಗೆ ಸಲ್ಲಿಸಲಾಗಿರುವ ನಾಮಪತ್ರ ಹಿಂಪಡೆಯಲು ಡಿ.11ರಂದು ಕೊನೆಯ ದಿನವಾಗಿತ್ತು.
ಕಾಂಗ್ರೆಸ್ ಪಕ್ಷದ ಆಂತರಿಕ ಚುನಾವಣಾ ಅಧಿಕಾರಿ ಮುಲ್ಲಪಳ್ಳಿ ರಾಮಚಂದ್ರನ್ ಸೋಮವಾರ ಅಪರಾಹ್ನ ರಾಹುಲ್ ಗಾಂಧಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದನ್ನುಅಧಿಕೃತವಾಗಿ ಪ್ರಕಟಿಸಿದರು. ಇದರೊಂದಿಗೆ ಕಾಂಗ್ರೆಸ್ ಗೆ ನೆಹರೂ, ಗಾಂಧಿ ಕುಟುಂಬದ ಆರನೇ ವ್ಯಕ್ತಿ ಅಧ್ಯಕ್ಷರಾಗಿದ್ದಾರೆ. ಮೋತಿಲಾಲ್ ನೆಹರೂ, ಜವಾಹರ್ ಲಾಲ್ ನೆಹರೂ, ಇಂದಿರಾಗಾಂಧಿ , ರಾಜೀವ ಗಾಂಧಿ, ಸೋನಿಯಾ ಗಾಂಧಿ ಈ ಹಿಂದೆ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಡಿ.16ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಹುಲ್ ಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.
2004ರಿಂದ ಸಕ್ರೀಯ ರಾಜಕಾರಣದಲ್ಲಿರುವ ರಾಹುಲ್ ಗಾಂಧಿ 2013ರಲ್ಲಿ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಾಲ್ಕು ವರ್ಷಗಳ ಬಳಿಕ 47ರ ಹರೆಯದ ರಾಹುಲ್ ಗಾಂಧಿ ಅವರು 132 ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
1998ರಲ್ಲಿ ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. 19 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಿದ್ದ ಸೋನಿಯಾ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಸತತ ಎರಡು ಲೋಕಸಭಾ ಚುನಾವಣೆಯಲ್ಲಿ ಜಯ ಗಳಿಸಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.