varthabharthi

ಬೆಂಗಳೂರು

ರಾಘವೇಶ್ವರ ಶ್ರೀ ವಿರುದ್ಧದ ಅತ್ಯಾಚಾರ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾ.ಕೆ.ಎನ್.ಫಣೀಂದ್ರ

ವಾರ್ತಾ ಭಾರತಿ : 12 Jan, 2018

ಬೆಂಗಳೂರು, ಜ.12: ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ್ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಹೊಸನಗರ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳನ್ನು ಆರೋಪ ಮುಕ್ತಗೊಳಿಸಿದ್ದ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯಿಂದ ಹೈಕೋರ್ಟ್ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹಿಂದೆ ಸರಿದಿದ್ದಾರೆ.

ಬೆಂಗಳೂರು ನಗರ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ಶುಕ್ರವಾರ ವಿಚಾರಣೆಗೆ ಬರುತ್ತಿದ್ದಂತೆಯೇ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ವಿಚಾರಣೆಯಿಂದ ಹಿಂದೆ ಸರಿದರು.

ಸ್ವಾಮೀಜಿ ವಿರುದ್ಧದ ಅತ್ಯಾಚಾರ ಆರೋಪ ಸಾಬೀತುಪಡಿಸಲು ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಮತ್ತು ಈ ಕುರಿತಂತೆ ತನಿಖೆ ನಡೆಸಿದ ಸಿಐಡಿ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯಲ್ಲೂ ಆರೋಪ ಸಾಬೀತುಪಡಿಸುವಂತಹ ಯಾವುದೇ ಸಾಕ್ಷಗಳಿಲ್ಲ ಎನ್ನುವ ಮೂಲಕ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಿ.ಬಿ.ಮುದಿಗೌಡರ್ ಅವರು ರಾಘವೇಶ್ವರಶ್ರೀಗಳನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿ ತೀರ್ಪು ಪ್ರಕಟಿಸಿದ್ದರು.

ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಗಾಯಕಿ ಪ್ರೇಮಲತಾ ದಿವಾಕರ್ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಶುಕ್ರವಾರ ಈ ಅರ್ಜಿ ವಿಚಾರಣೆಗೆ ಬರುತ್ತಿದ್ದಂತೆಯೇ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ವಿಚಾರಣೆಯಿಂದ ಹಿಂದೆ ಸರಿದರು.

ಪ್ರಕರಣವೇನು: ಶಿವಮೊಗ್ಗ ಜಿಲ್ಲೆ ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ತನ್ನ ತಾಯಿಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾರೆ ಎಂದು ಮಠದ ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ ಶಾಸ್ತ್ರಿ ಅವರ ಪುತ್ರಿ 2014ರಲ್ಲಿ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಮಧ್ಯೆ ಸ್ವಾಮೀಜಿ ವಿರುದ್ಧ ರಾಜ್ಯಾದ್ಯಂತ ಪ್ರಗತಿಪರ ಸಂಘಟನೆಗಳು ಹೋರಾಟ ನಡೆಸಿದ್ದವು.ಈ ಹಿನ್ನೆಲೆಯಲ್ಲಿ ಸರಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು 1ನೆ ಎಸಿಎಂಎಂ ನ್ಯಾಯಾಲಯಕ್ಕೆ  ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನಂತರ ವಿಚಾರಣೆಯನ್ನು ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶ ಜಿ.ಬಿ.ಮುದಿಗೌಡರ್ ನಡೆಸುತ್ತಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)