varthabharthi

ಬೆಂಗಳೂರು

‘ಸುಪ್ರೀಂ’ನಲ್ಲಿ ಪ್ರಜಾಪ್ರಭುತ್ವ ವಿರೋಧಿ ತಂತ್ರ: ಪ್ರೊ.ಬಿ.ಕೆ.ಚಂದ್ರಶೇಖರ್

ವಾರ್ತಾ ಭಾರತಿ : 13 Jan, 2018
Varthabharathi

 ಬೆಂಗಳೂರು, ಜ.13: ದೇಶದ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಜಾಪ್ರಭುತ್ವ ವಿರೋಧಿ ತಂತ್ರಗಳು ನಡೆಯುತ್ತಿರುವುದಾಗಿ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಬಹಿರಂಗವಾಗಿ ಆರೋಪ ಮಾಡಿರುವುದು ಗಂಭೀರವಾದ ವಿಷಯವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಪ್ರೊ.ಬಿ.ಕೆ.ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯಾಯಪೀಠಗಳಿಗೆ ಪ್ರಕರಣಗಳನ್ನು ನೀಡುವ ವಿಚಾರದಲ್ಲಿ ಮುಖ್ಯ ನ್ಯಾಯಮೂರ್ತಿಗಳು ತಾರತಮ್ಯ ನಡೆಸುತ್ತಿದ್ದಾರೆ ಎಂಬ ಆರೋಪವು ಕಳವಳಕಾರಿಯಾಗಿದೆ ಎಂದರು.

ವೈದ್ಯಕೀಯ ಕಾಲೇಜು ಪ್ರವೇಶ ಹಗರಣ, ಆಧಾರ್ ಪ್ರಕರಣವನ್ನು ನ್ಯಾಯಪೀಠಗಳಿಗೆ ನೀಡುವ ವಿಚಾರದಲ್ಲಿ ಮುಖ್ಯ ನ್ಯಾಯಮೂರ್ತಿ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಆರೋಪಿಸುವ ಮೂಲಕ, ಹಿರಿಯ ನ್ಯಾಯಮೂರ್ತಿಗಳು ಸುಪ್ರೀಂಕೋರ್ಟ್‌ನಲ್ಲಿರುವ ಅವ್ಯವಸ್ಥೆಯನ್ನು ಬಹಿರಂಗಪಡಿಸಿದ್ದಾರೆ ಎಂದು ಅವರು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ ಹಾಗೂ ಘನತೆಯನ್ನು ಹೊಂದಿರುವ ಸುಪ್ರೀಂಕೋರ್ಟ್ ಬಗ್ಗೆಯೂ ಜನಸಾಮಾನ್ಯರು ಅನುಮಾನದಿಂದ ನೋಡುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು, ನಿಜಕ್ಕೂ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಚಂದ್ರಶೇಖರ್ ತಿಳಿಸಿದರು.

ಅಮಿತ್ ಶಾ ವಿರುದ್ಧ ವಾಗ್ದಾಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂನೇ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೀಡಿರುವ ಹೇಳಿಕೆಯನ್ನು ಖಂಡಿಸಿದ ಅವರು, ಅಮಿತ್ ಶಾ ಇಂತಹ ಹೇಳಿಕೆಗಳನ್ನು ನೀಡುವುದನ್ನು ಬಿಡಬೇಕು. ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯರನ್ನು ಪ್ರಚೋದಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

 

Comments (Click here to Expand)