varthabharthi

ಬೆಂಗಳೂರು

ಮುಖ್ಯಮಂತ್ರಿಯಿಂದ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಬಸ್ ಪ್ರಯಾಣ ದರ ಹೆಚ್ಚಿಸದೇ ನಷ್ಟ ಸರಿದೂಗಿಸಲು ಪರ್ಯಾಯ ಮಾರ್ಗಕ್ಕೆ ಸಿಎಂ ಸೂಚನೆ

ವಾರ್ತಾ ಭಾರತಿ : 12 Oct, 2018

ಬೆಂಗಳೂರು, ಅ. 12: ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಿಸದೆ ನಷ್ಟವನ್ನು ಸರಿದೂಗಿಸಲು ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಬೇಕೆಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರಿಗೆ ಇಲಾಖೆಯಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ರಾಜಸ್ವ ಸಂಗ್ರಹಣೆಯಲ್ಲಿ 131ಕೋಟಿ ರೂ. ಹೆಚ್ಚಳವಾಗಿದ್ದು, ಸಾರಿಗೆ ಸಂಸ್ಥೆಗಳು ಪ್ರಯಾಣಿಕರ ಆಶಯಗಳನ್ನು ಅರ್ಥೈಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಸಾರ್ವತ್ರಿಕ ಪ್ರಯಾಣಕರಿಗೆ ಸಾರಿಗೆ ಸಂಸ್ಥೆ ಬಸ್ ಸೌಲಭ್ಯ ಮಾತ್ರವಲ್ಲದೆ ಅವರಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ವಿಸ್ತರಿಸಲು ಕ್ರಮ ಕೈಗೊಳ್ಳಬೇಕು ಎಂದ ಕುಮಾರಸ್ವಾಮಿ, ನಮ್ಮ ಮೆಟ್ರೋ ರೈಲಿನೊಂದಿಗೆ ಸಮನ್ವಯ ಸಾಧಿಸುವತ್ತ ಗಮನ ಹರಿಸಬೇಕು ಎಂದು ಹೇಳಿದರು.

ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಬಸ್ ಪ್ರಯಾಣದ ದರ ಹೆಚ್ಚಿಸುವ ಬಗ್ಗೆ ಸಾರ್ವಜನಿಕ ಅಭಿಪ್ರಾಯವನ್ನು ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು, ಸಾರಿಗೆ ಸಂಸ್ಥೆಗಳು ಉಳಿಯಬೇಕು, ಜೊತೆಗೆ ಸಾರ್ವಜನಿಕರಿಗೆ ಹೊರೆಯಾಗದಂತೆ ಬಸ್ ಪ್ರಯಾಣ ದರ ಏರಿಕೆ ಸಂಬಂಧ ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಬಸವರಾಜು ಹಾಜರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)