varthabharthi

ಕರ್ನಾಟಕ

ವೀರಶೈವ-ಲಿಂಗಾಯತರು ಕಾಂಗ್ರೆಸ್‌ಗೆ ಮತ ಹಾಕಿದರೆ ಅಪರಾಧ: ಯಡಿಯೂರಪ್ಪ

ವಾರ್ತಾ ಭಾರತಿ : 15 May, 2019

ಕಲಬುರ್ಗಿ, ಮೇ 15: ಕಾಂಗ್ರೆಸ್ ನಾಯಕರು ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರಿಗೆ ಅವಮಾನ ಮಾಡಿದ್ದಾರೆ. ಆದುದರಿಂದ, ವೀರಶೈವ-ಲಿಂಗಾಯತ ಸಮಾಜದವರು ಅವರಿಗೆ ಒಂದು ಮತವನ್ನು ಹಾಕುವ ಅಪರಾಧವನ್ನು ಮಾಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.

ಬುಧವಾರ ನಗರದ ಕಾಳಗಿ ಪಟ್ಟಣದಲ್ಲಿ ಆಯೋಜಿಸಿದ್ದ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಣ, ಹೆಂಡದ ಬಲದಿಂದ ಈ ಚುನಾವಣೆಯಲ್ಲಿ ಗೆಲುವು ಸಾಧಿಸುವ ಭ್ರಮೆಯಲ್ಲಿರುವ ಕಾಂಗ್ರೆಸ್‌ಗೆ ಮತದಾರರು ತಕ್ಕ ಪಾಠ ಕಲಿಸಬೇಕು ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 37 ಸ್ಥಾನಗಳನ್ನು ಪಡೆದಿರುವ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. 104 ಸ್ಥಾನಗಳನ್ನು ಪಡೆದು ಅತೀ ದೊಡ್ಡ ಪಕ್ಷವಾಗಿರುವ ಬಿಜೆಪಿ ವಿರೋಧ ಪಕ್ಷದ ಸ್ಥಾನದಲ್ಲಿದೆ. ಇದನ್ನು ಯಾವ ರೀತಿ ನಾವು ಸಹಿಸಿಕೊಳ್ಳಬೇಕು ಎಂದು ಯಡಿಯೂರಪ್ಪ ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗುವುದು. ಚಿಂಚೋಳಿಯಲ್ಲಿ ನಮ್ಮ ಅಭ್ಯರ್ಥಿ ಡಾ.ಅವಿನಾಶ್ ಜಾಧವ್‌ರನ್ನು ಗೆಲ್ಲಿಸಿದರೆ, ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ಅವರು ಭರವಸೆ ನೀಡಿದರು.

ತುಘಲಕ್ ದರ್ಬಾರ್, ವರ್ಗಾವಣೆ ದಂಧೆ, ಹಗಲು ದರೋಡೆ ಮಾಡುವ, ಸುಳ್ಳು ಭರವಸೆ ನೀಡುವ ಈ ಸರಕಾರಕ್ಕೆ ಮತದಾರರು ತಕ್ಕ ಪಾಠ ಕಲಿಸಬೇಕು. ಬರಗಾಲದಿಂದ ಜನ ಸಾಮಾನ್ಯರು, ರೈತರು ಕಂಗಾಲಾಗಿದ್ದಾರೆ. ಆದರೆ, ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳದೆ ಜನರ ಜೀವದ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಯಡಿಯೂರಪ್ಪ ದೂರಿದರು.

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಅನೇಕ ಜನಪರವಾದ ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. ರಾಜ್ಯದಲ್ಲಿ ಹಣಕಾಸಿನ ಕೊರತೆಯಿಲ್ಲ. ಆದರೆ, ಆಡಳಿತ ನಡೆಸಲು ಪ್ರಾಮಾಣಿಕ ವ್ಯಕ್ತಿಗಳ ಕೊರತೆಯಾಗಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ, ಅಭಿವೃದ್ಧಿಯ ಪರ್ವ ಆರಂಭವಾಗಲಿದೆ ಎಂದು ಅವರು ಹೇಳಿದರು.

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಕೆ.ಎಚ್.ಮುನಿಯಪ್ಪ ಮನೆಗೆ ಹೋಗುತ್ತಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಗುರವಾಗಿ ಮಾತನಾಡುವವರಿಗೆ ಮತದಾರರು ಪಾಠ ಕಲಿಸಬೇಕಾಗಿದೆ ಎಂದರು.

ವೀರಶೈವ-ಲಿಂಗಾಯತ ಸಮಾಜದವರು ನಮಗೆ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸವಿದೆ. ಈ ಸಮಾಜದವರಿಗೆ ಬಿಜೆಪಿಯವರು ಏನು ಮಾಡಿದ್ದಾರೆ. ಯಡಿಯೂರಪ್ಪರನ್ನು ಮುಖ್ಯಮಂತ್ರಿ ಮಾಡಲು ಆಗಿಲ್ಲ. ಕೇಂದ್ರದಲ್ಲಿ ಐದು ವರ್ಷ ಬಿಜೆಪಿ ಸರಕಾರವಿದ್ದರೂ ಯಡಿಯೂರಪ್ಪ ಸೇರಿದಂತೆ ವೀರಶೈವ-ಲಿಂಗಾಯತ ಸಮಾಜದ ಒಬ್ಬ ಸಂಸದನಿಗೂ ಕೇಂದ್ರ ಸಚಿವರನ್ನಾಗಿ ಮಾಡುವ ಯೋಗ್ಯತೆಯಿಲ್ಲ. ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದು ಬಸವ ಜಯಂತಿ ಅಂದು. ಸರಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಅಳವಡಿಸಿದ್ದು, ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಿಸಿದ್ದ ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ. ಬಸವ ತತ್ವ ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದರೆ ಬಸವ ತತ್ವ.
-ಡಿ.ಕೆ.ಶಿವಕುಮಾರ್, ಜಲಸಂಪನ್ಮೂಲ ಸಚಿವ

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)