varthabharthi

ಕರ್ನಾಟಕ

ಯಡಿಯೂರಪ್ಪ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು

ವಾರ್ತಾ ಭಾರತಿ : 15 May, 2019

ಬೆಂಗಳೂರು, ಮೇ 15: ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒಂದು ಸಮುದಾಯದ ಮತದಾರರ ಮೇಲೆ ಪ್ರಭಾವ ಬೀರುವ ದುರುದ್ದೇಶಪೂರಿತ ಹೇಳಿಕೆಯನ್ನು ನೀಡಿದ್ದಾರೆ. ಹೀಗಾಗಿ, ಇವರ ವಿರುದ್ಧ ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 123(3) ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಚುನಾವಣಾ ಆಯುಕ್ತರಿಗೆ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ, ಕಾರ್ಯದರ್ಶಿ ಎ.ಎನ್.ನಟರಾಜಗೌಡ ಹಾಗೂ ಮತ್ತಿತರರು ದೂರು ನೀಡಿದ್ದಾರೆ.

ಯಡಿಯೂರಪ್ಪ ಅವರು ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿಯಲ್ಲಿ ಬಹಿರಂಗ ಪ್ರಚಾರದ ಸಭೆಯಲ್ಲಿ ವೀರೇಂದ್ರ ಪಾಟೀಲರಿಗೆ ಅವಮಾನಿಸಿದ ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತರು ಮತ ನೀಡಿದರೆ ಅಪರಾಧ ಮಾಡಿದಂತೆ ಎಂಬ ಹೇಳಿಕೆಯನ್ನು ನೀಡುವ ಮೂಲಕ ಒಂದು ಸಮುದಾಯದ ಜನರನ್ನು ಪ್ರಚೋದಿಸುವ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿರುದ್ಧ ಜಾತಿಯಾಧಾರಿತ ಮತ ಧ್ರುವೀಕರಣ ಮಾಡುವ ದುರುದ್ದೇಶ ಈ ಹೇಳಿಕೆಯಲ್ಲಿ ಅಡಗಿದೆ. ಹೀಗಾಗಿ, ಯಡಿಯೂರಪ್ಪ ವಿರುದ್ಧ ಸುಪ್ರೀಕೋರ್ಟ್‌ನ ಆದೇಶದ ಪ್ರಕಾರ ಜನಪ್ರತಿನಿಧಿ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಉಪ ಚುನಾವಣೆಯ ಮತದಾನಕ್ಕೆ ಇನ್ನು ಕೇವಲ ನಾಲ್ಕು ದಿನಗಳು ಮಾತ್ರ ಬಾಕಿ ಇರುವಾಗ ಲಿಂಗಾಯತ ವೀರಶೈವ ಸಮುದಾಯಕ್ಕೆ ಸೇರಿದ ಯಡಿಯೂರಪ್ಪ ಆ ಸಮುದಾಯದ ಮತದಾರರ ಮೇಲೆ ಜಾತಿಯಾಧಾರಿತವಾಗಿ ಪ್ರಭಾವ ಬೀರಿ ನಿಷ್ಪಕ್ಷಪಾತ ಮತದಾನಕ್ಕೆ ಅಡ್ಡಿ ಪಡಿಸಿದ್ದಾರೆ. ಹೀಗಾಗಿ, ಯಡಿಯೂರಪ್ಪ ವಿರುದ್ಧ ಜನಪ್ರತಿನಿಧಿಗಳ ಕಾಯ್ದೆ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಚುನಾವಣೆ ಆಯೋಗಕ್ಕೆ ಮೇ 15ರಂದು ಸಾಮಾಜಿಕ ಜಾಲತಾಣದ ಸಂಚಾಲಕ ಎ.ಎನ್.ನಟರಾಜಗೌಡ, ತುಮಕೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಅದ್ದೆ, ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್, ಸಾಮಾಜಿಕ ಜಾಲತಾಣ ವಿಭಾಗದ ಕಾನೂನು ಸಲಹೆಗಾರ ಎಚ್.ವಿ.ಭವ್ಯ ಅನು ಅವರು ದೂರು ನೀಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)