varthabharthi

ಕರಾವಳಿ

ಜನಸಂಖ್ಯೆ ಹೆಚ್ಚಳದಿಂದ ಪ್ರಾಕೃತಿಕ ಅಸಮತೋಲನ: ದಿನಕರ ಬಾಬು

ವಾರ್ತಾ ಭಾರತಿ : 11 Jul, 2019

ಉಡುಪಿ, ಜು.11: ಜನಸಂಖ್ಯೆ ಹೆಚ್ಚಳ ಪ್ರಾಕೃತಿಕ ಅಸಮತೋಲನಕ್ಕೆ ಕಾರಣ ವಾಗುತ್ತದೆ. ಆದುದರಿಂದ ಆರೋಗ್ಯ ಇಲಾಖೆಯಿಂದ ನಡೆಯುವ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಎಲ್ಲರೂ ತೊಡಗಿಸಿಕೊಂಡು ಜನಸಂಖ್ಯೆ ನಿಯಂತ್ರಣದಲ್ಲಿ ಕೈಜೋಡಿಸಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ, ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಕುಟುಂಬ ಕಲ್ಯಾಣ ನಿಭಾ ಯಿಸುವ ಜವಾಬ್ದಾರಿ, ತಾಯಿ ಮತ್ತು ಮಗುವಿನ ಆರೋಗ್ಯದ ಪೂರ್ಣ ತಯಾರಿ’ ಎಂಬ ಘೋಷ ವಾಕ್ಯದಡಿಯಲ್ಲಿ ಮಹಿಳಾ ಕಾಲೇಜಿನಲ್ಲಿ ಇಂದು ಆಯೋಜಿಸಲಾದ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮಹಿಳೆಯರು ಜನಸಂಖ್ಯಾ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಿದರೆ ಅದರಲ್ಲಿ ಉತ್ತಮ ಫಲಿತಾಂಶ ಪಡೆಯಬಹುದು. ದೇಶದಲ್ಲಿರುವ ಯುವ ಸಂಪತ್ತನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಂಡರೆ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಜನಸಂಖ್ಯೆ ಜಾಗೃತಿ ಕುರಿತ ಕರಪತ್ರವನ್ನು ಬಿಡುಗಡೆಗೊಳಿಸಿದ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಮಾತನಾಡಿ, ಮಿತವಾದ ಪ್ರಮಾಣದಲ್ಲಿ ಜನಸಂಖ್ಯೆ ಇದ್ದರೆ ಸರಕಾರದಿಂದ ಕೊಡಮಾಡುವ ಸವಲತ್ತುಗಳನ್ನು ಸರಿಯಾದ ಪ್ರಮಾಣ ದಲ್ಲಿ ಹಂಚಿಕೆ ಮಾಡಿ ದೇಶ ಪ್ರಗತಿ ಪಥದಲ್ಲಿ ಸಾಗಲು ಸಹಕಾರಿಯಾಗುತ್ತದೆ. ಶಿಕ್ಷಣ ಪಡೆದ ಯುವಕ ಯುವತಿಯರು ಜಾಗೃತರಾಗಿದ್ದು, ಮುಂದಿನ ದಿನಗಳಲ್ಲಿ ಜನಸಂಖ್ಯಾ ದಿನಾಚರಣೆಯ ಯೋಜನೆ ಫಲಕಾರಿಯಾಗಲಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಮಾತನಾಡಿ, ಜನಸಂಖ್ಯೆ, ನೀರು, ಪರಿಸರ, ಆರೋಗ್ಯ ಕುರಿತು ಅರಿವು ಮತ್ತು ಜಾಗೃತಿ ಹೊಂದಿರುವುದು ಅತ್ಯಂತ ಅಗತ್ಯ. ಸಶಕ್ತ ದೇಶ ಕಟ್ಟುವ ವಿಚಾರದಲ್ಲಿ ಯುವ ಜನತೆಗೆ ತಮ್ಮ ಪಾತ್ರದ ಬಗ್ಗೆ ಅರಿವು ಇರಬೇಕು. ದೇಶದಲ್ಲಿರುವ ಜನಸಂಖ್ಯೆಯನ್ನು ಉತ್ಪಾದಕ ಜನಸಂಖ್ಯೆಯಾಗಿ ರೂಪಿಸಿ ದೇಶದ ಪ್ರಗತಿಗೆ ಬಳಸಿಕೊಳ್ಳಬೇಕೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯ ಕುರಿತ ಪ್ರಬಂಧ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾ ಯಿತು. ಜನಸಂಖ್ಯಾ ಸ್ಪೋಟದ ಕುರಿತು ಕಿರು ನಾಟಕವನ್ನು ಪ್ರದರ್ಶಿಸ ಲಾಯಿತು. ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಕಾಲೇಜಿನ ಎನ್ನೆಸ್ಸೆಸ್ ಅಧಿಕಾರಿ ಡಾ.ರಾಜೇಂದ್ರ ಕೆ. ಉಪಸ್ಥಿತರಿದ್ದರು.

ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮ್ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರಭಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಜಿ.ರಾಮ ಸ್ವಾಗತಿಸಿದರು. ಆರೋಗ್ಯ ಮೇಲ್ವಿಚಾರಕ ಆನಂದ ಗೌಡ ವಂದಿಸಿದರು. ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿಜಯ ಬಾಯಿ ಹಾಗೂ ವಿದ್ಯಾರ್ಥಿನಿ ಸುಧಾ ಕಾರ್ಯಕ್ರಮ ನಿರೂಪಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)