varthabharthi


ಕರಾವಳಿ

​ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಿಂದಲೇ ಧ್ವಜಾರೋಹಣ

ವಾರ್ತಾ ಭಾರತಿ : 13 Aug, 2019

ಮಂಗಳೂರು, ಆ.13: ಪ್ರಸಕ್ತ 2019ನೇ ಸಾಲಿನ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಆ.15ರಂದು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ಮಾಡುವಂತೆ ರಾಜ್ಯ ಸರಕಾರ ಮಂಗಳವಾರ ನೂತನ ಆದೇಶ ಹೊರಡಿಸಿದೆ.

ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಧ್ವಜಾರೋಹಣ ನೆರವೇರಿಸಿದರೆ, ಉಪ ವಿಭಾಗಗಳಲ್ಲಿ ಉಪವಿಭಾಗಾಧಿಕಾರಿಗಳು ಮತ್ತು ತಾಲೂಕುಗಳಲ್ಲಿ ತಹಶೀಲ್ದಾರ್‌ರು ಧ್ವಜಾರೋಹಣ ನೆರವೇರಿಸಲು ಸೂಚಿಸಿದೆ. ಪ್ರಸ್ತುತ ರಾಜ್ಯದಲ್ಲಿನ ಬಹುತೇಕ ಜಿಲ್ಲೆಗಳಲ್ಲಿ ನೆರೆಯ ಕಾರಣದಿಂದಾಗಿ ಸ್ವಾತಂತ್ರ ದಿನಾಚರಣೆಯನ್ನು ಸರಳವಾಗಿ ಆಚರಿಸಲು ಆದೇಶಿಸಿದೆ.

ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಂದ ಆ.15ರಂದು ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಇಲ್ಲಿಯವರೆಗೆ ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಚಿವರಿಂದಲೇ ಧ್ಜಜಾರೋಹಣ ನಡೆಯುತ್ತಿತ್ತು. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಇತ್ತೀಚೆಗೆ ಪ್ರಮಾಣವಚನ ಸ್ವೀಕರಿಸಿದರು. ಆದರೆ, ಇಲ್ಲಿಯವರೆಗೂ ರಾಜ್ಯ ಸಚಿವ ಸಂಪುಟ ರಚನೆಯಾಗದ ಕಾರಣ ಉಸ್ತುವಾರಿ ಸಚಿವರ ನೇಮಕವಾಗಿಲ್ಲ. ಹೀಗಾಗಿ ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯೇ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)