varthabharthi

ಕರಾವಳಿ

ದ.ಕ. ಜಿಪಂ ಮಾಸಿಕ ಕೆಡಿಪಿ ಸಭೆ

‘ಪಶ್ಚಿಮ ವಾಹಿನಿ: ಎಂಟು ಕಿರುಅಣೆಕಟ್ಟು ಶೀಘ್ರ ನಿರ್ಮಾಣ’

ವಾರ್ತಾ ಭಾರತಿ : 11 Sep, 2019

ಮಂಗಳೂರು, ಸೆ.11: ರಾಜ್ಯದ ಕರಾವಳಿಯಲ್ಲಿ ನೀರಾವರಿ ಸೌಲಭ್ಯ ಒದಗಿಸಲು ಜಾರಿಗೆ ತಂದಿರುವ ಪಶ್ಚಿಮ ವಾಹಿನಿ ಯೋಜನೆಯಲ್ಲಿ ದ.ಕ. ಜಿಲ್ಲೆಯಲ್ಲಿ ಎಂಟು ಕಿಂಡಿ ಅಣೆಕಟ್ಟು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

 ಬುಧವಾರ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆಯಲ್ಲಿ ನೇತ್ರಾವತಿ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಅಧ್ಯಕ್ಷರಿಗೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಅಣೆಕಟ್ಟುಗಳ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಮುಂದಿನ ವರ್ಷದ ಮಾರ್ಚ್ ಒಳಗೆ ಕಾಮಗಾರಿ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ಕಡಿರುದ್ಯಾವರ, ನಿಡ್ಡೋಡಿ, ನಿಟ್ಟಡೆ, ಮಾರೂರು, ಕೊಳವೂರು, ಪುಚ್ಚಮೊಗರು, ಕರ್ಪೆ, ಪೊಳಲಿ, ಚಾರ್ವಾಕದಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಬಿಳಿಯೂರು ಹಾಗೂ ಹರೇಕಳದಲ್ಲಿ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ ಎಂದು ತಿಳಿಸಿದರು.

ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ, ಜಿಲ್ಲೆಯಲ್ಲಿ ಅಂಗನವಾಡಿಗಳಿಗೆ ಸಂಬಂಧಿಸಿದಂತೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ಬಗ್ಗೆ ಒಂದು ವಾರದೊಳಗೆ ಸಂಬಂಧಪಟ್ಟ ಅಂಗನವಾಡಿಗಳಿಗೆ ಭೇಟಿ ನೀಡಿ ವರದಿ ನೀಡಲು ಸೂಚಿಸಿದರು.

ಕ್ರೀಡಾ ಇಲಾಖೆಯಿಂದ ನೀಡುವ ಸಹಾಯಧನ ಕುರಿತ ಮಾಹಿತಿಯನ್ನು ಜಿಲ್ಲಾ ಪಂಚಾಯತ್ ಗಮನಕ್ಕೆ ತರುವಂತೆ ಸೂಚನೆ ನೀಡಲಾಯಿತು. ಪಡಿತರ ಚೀಟಿ ವಿತರಣೆಯ ಕೆಲಸಗಳು ಸಾರ್ವಜನಿಕರಿಗೆ ಅನೂಕೂಲವಾಗುವಂತೆ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

ಜಿಪಂ ಉಪಾಧ್ಯಕ್ಷೆ ಕಸೂರಿ ಪಂಜ ಮಾತನಾಡಿ, ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳನ್ನು ತುರ್ತು ಸಂದರ್ಭಗಳಲ್ಲಿ ವೆನ್‌ಲಾಕ್‌ಗೆ ವರ್ಗಾಯಿಸಿದ ಸಂದರ್ಭದಲ್ಲಿ ಅಲ್ಲಿ ದಾಖಲಿಸಲು ವಿಳಂಬ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಇದಕ್ಕೆ ಆಸ್ಪದೆ ನೀಡದೇ ಎರಡೂ ಆಸ್ಪತ್ರೆಗಳು ರೋಗಿಯನ್ನು ವರ್ಗಾಯಿಸುವ ಮೊದಲೇ ಸಮನ್ವಯದಿಂದ ಕಾರ್ಯನಿರ್ವಹಿಸಿ, ಸೂಕ್ತ ವ್ಯವಸ್ಥೆ ಕಲ್ಪಿಸಿದ ನಂತರ ವರ್ಗಾಯಿಸಬೇಕು ಎಂದು ಸೂಚಿಸಿದರು.

‘ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ 387 ಹೆಕ್ಟೇರ್ ಭತ್ತದ ಕೃಷಿ ನಾಶವಾಗಿದೆ. ಈಗಾಗಲೇ ಈ ನಷ್ಟವನ್ನು ಸಮೀಕ್ಷೆ ಮಾಡಿ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ. ಪ್ರತೀ ಹೆಕ್ಟೇರ್ ನಷ್ಟಕ್ಕೆ 6,800 ರೂ. ಪರಿಹಾರ ದೊರಕಲಿದೆ’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಶಾಲಾ ಕಟ್ಟಡಗಳ ದುರಸ್ತಿ ಕಾಮಗಾರಿಗಳಿಗೆ 10.28 ಕೋಟಿ ರೂ. ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಡಿಡಿಪಿಐ ಶಿವರಾಮಯ್ಯ ತಿಳಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಡಾ.ಸೆಲ್ವಮಣಿ, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)