varthabharthi



ಕರಾವಳಿ

ತೋಟಗಾರಿಕಾ ಬೆಳೆಗಳ ಸರಬರಾಜಿಗೆ ಲಾಕ್‌ಡೌನ್‌ನಿಂದ ವಿನಾಯತಿ: ಉಡುಪಿ ಜಿಲ್ಲಾಧಿಕಾರಿ

ವಾರ್ತಾ ಭಾರತಿ : 1 Apr, 2020

ಉಡುಪಿ, ಎ.1: ಉಡುಪಿ ಜಿಲ್ಲೆಯಲ್ಲಿ ಎಲ್ಲಾ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ರೈತರು ತಾವು ಬೆಳೆದ ತೋಟಗಾರಿಕೆ ಉತ್ಪನ್ನಗಳಾದ ಹಣ್ಣು ಮತ್ತು ತರಕಾರಿಗಳನ್ನು ಸರಬರಾಜು ಮಾಡಲು ಲಾಕ್‌ಡೌನ್ ಆದೇಶದಿಂದ ವಿನಾಯಿತಿ ನೀಡಲಾಗಿದೆ. ಹೀಗಾಗಿ ತೋಟಗಾರಿಕೆ ಬೆಳೆಗಾರರು ತಾವು ಬೆಳೆದ, ದಾಸ್ತಾನು ಮಾಡಿಕೊಂಡಿರುವ ಹಣ್ಣು ಮತ್ತು ತರಕಾರಿಗಳನ್ನು ಆಯಾ ಮಾರುಕಟ್ಟೆಗೆ, ಹೊರ ಜಿಲ್ಲೆಗಳಿಗೆ ಮತ್ತು ಹೊರ ರಾಜ್ಯಗಳಿಗೆ ಸಾಗಿಸಲು ಅನುಮತಿ ನೀಡಲಾಗಿದೆ.

ಜಿಲ್ಲೆಯ ತೋಟಗಾರಿಕೆ ಬೆಳೆಗಾರರು ಬೆಳೆದ ಉತ್ಪನ್ನಗಳನ್ನು ಸಗಟು ವ್ಯಾಪಾರಿಗಳು ಖರೀದಿಸಿ ಮಾರಾಟ ಮಾಡಲು ಸಹ ಅನುಮತಿ ನೀಡಲಾಗಿದೆ. ಸಗಟು ವ್ಯಾಪಾರಿಗಳು ತೋಟಗಾರಿಕೆಗೆ ಸಂಬಂಧಿಸಿದ ಕೂಲಿಕಾರರಿಗೆ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್‌ಗಳನ್ನು ಒದಗಿಸಬೇಕು. ಹಾಗೂ ಅವು ಗಳನ್ನು ಕಡ್ಡಾಯವಾಗಿ ಉಪಯೋಗಿಸುವ ಮೂಲಕ ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು.

ಅಲ್ಲದೇ ಈ ವೇಳೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮಾರಾಟ ವ್ಯವಹಾರ ನಡೆಸುವಂತೆ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗೆ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಗಳನ್ನು ಹಾಗೂ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಉಡುಪಿ ಹಾಗೂ ಕಾರ್ಕಳ -9481440812, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಕುಂದಾಪುರ-9900565469 ಇವರನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)