varthabharthi



ಕರ್ನಾಟಕ

ಸೋನಿಯಾ ಗಾಂಧಿ ವಿರುದ್ಧದ ಎಫ್‍ಐಆರ್ ಹಿಂಪಡೆಯದಿದ್ದರೆ ಉಗ್ರ ಹೋರಾಟ: ಡಿಕೆಶಿ ಎಚ್ಚರಿಕೆ

ವಾರ್ತಾ ಭಾರತಿ : 21 May, 2020

ಬೆಂಗಳೂರು, ಮೇ 21: ಕೇಂದ್ರ ಸರಕಾರದ ವಿರುದ್ಧ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಪ್ರಶ್ನಿಸಿರುವುದರ ವಿರುದ್ಧದ ಪ್ರಕರಣವನ್ನು 24 ತಾಸಿನಲ್ಲಿ ಹಿಂಪಡೆದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಒಂದು ವೇಳೆ ಎಫ್‍ಐಆರ್ ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಸೋನಿಯಾ ಗಾಂಧಿ ವಿರುದ್ಧ ಶಿವಮೊಗ್ಗ ಜಿಲ್ಲೆ ಸಾಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ತಮ್ಮ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ತಂಡ ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

'ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ನಮ್ಮ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ವಿರೋಧ ಪಕ್ಷದ ನಾಯಕಿಯಾಗಿ ಕೇಂದ್ರ ಸರಕಾರವನ್ನು ಪ್ರಶ್ನಿಸಿದ್ದಾರೆ. ಅದು ಅವರ ಹಕ್ಕು ಹಾಗೂ ಕರ್ತವ್ಯ. ಆದರೆ ಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಂಡು ವಿರೋಧ ಪಕ್ಷಗಳ ಧ್ವನಿಯನ್ನು ದಮನ ಮಾಡುವ ಪ್ರಯತ್ನ ಮಾಡುತ್ತಿರುವುದು ಆಘಾತಕಾರಿಯಾಗಿದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತ ಹಾಗೂ ವಕೀಲ ಪ್ರವೀಣ್ ಕುಮಾರ್ ಎಂಬುವವರು ತಮ್ಮ ಸಂಬಂಧಿ ಪೊಲೀಸ್ ಅಧಿಕಾರಿಗೆ ದೂರು ನೀಡಿದ್ದು, ದೂರು ದಾಖಲಿಸಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಇದು ಸೂಕ್ಷ್ಮ ವಿಚಾರವಾಗಿದ್ದು, ದೇಶದಲ್ಲಿ ದೊಡ್ಡ ಸಂಚಲನ ಉಂಟು ಮಾಡುವ ವಿಚಾರ. ಅಷ್ಟೇ ಅಲ್ಲ ಇದು ದ್ವೇಷ ಮನೋಭಾವ ಹಾಗೂ ಅಧಿಕಾರ ದುರುಪಯೋಗದ ವಿಚಾರವಾಗಿದೆ. ಇಂತಹ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳು ಯಾವ ಮಟ್ಟಿಗೆ ಕೆಲಸ ಮಾಡಬೇಕು ಎಂಬ ಪ್ರಶ್ನೆ ಉದ್ಭವಿಸಿದೆ ಎಂದು ಅವರು ಹೇಳಿದರು.

ಈ ವಿಚಾರವಾಗಿ ನಾವು ಹೋರಾಟ ಮಾಡುವ ಮುನ್ನ ಚರ್ಚಿಸಬೇಕು ಎಂದು ಬೆಳಗ್ಗೆ ಗೃಹ ಸಚಿವ ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿ, ಈಗ ಮುಖ್ಯಮಂತ್ರಿಗಳ ಜತೆ ಮಾತನಾಡಲು ಆಗಮಿಸಿದೆವು. ಈ ವಿಚಾರದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು, ಸಂಬಂಧಪಟ್ಟ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದು ಅವರು ತಿಳಿಸಿದರು.

ಹೋರಾಟ ಮಾಡಲು ಅವಕಾಶ ನೀಡಬಾರದು ಎಂದು ನಾವು ಆಗ್ರಹಿಸಿದ್ದೇವೆ. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ 24 ಗಂಟೆಯಲ್ಲಿ ಎಫ್‍ಐಆರ್ ಹಿಂಪಡೆದು ಬಿ ರಿಪೋರ್ಟ್ ಸಿದ್ಧಪಡಿಸಲಾಗುವುದು, ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಒಂದೊಮ್ಮೆ ಎಫ್‍ಐಆರ್ ವಾಪಸು ಪಡೆಯದಿದ್ದರೆ ಬೀದಿಗಿಳಿದು ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಶಿವಕುಮಾರ್ ಎಚ್ಚರಿಕೆ ನೀಡಿದರು.

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಮ್ ಅಹ್ಮದ್ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ವಿ.ಎಸ್ ಉಗ್ರಪ್ಪ ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)