varthabharthiಬೆಂಗಳೂರು

ದಿನಸಿ ಕಿಟ್‍ಗಳ ಅಕ್ರಮ ದಾಸ್ತಾನು ಆರೋಪ: ಭೈರತಿ ಬಸವರಾಜ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ವಾರ್ತಾ ಭಾರತಿ : 22 May, 2020

ಬೆಂಗಳೂರು, ಮೇ 22: ಕೋವಿಡ್-19 ಹಿನ್ನೆಲೆಯಲ್ಲಿ ವಲಸಿಗ ಕಾರ್ಮಿಕರಿಗೆ ವಿತರಿಸಲು ರಾಜ್ಯ ಸರಕಾರದ ಕಾರ್ಮಿಕ ಇಲಾಖೆ ವತಿಯಿಂದ ಸಿದ್ಧಪಡಿಸಲಾಗಿದ್ದ ದಿನಸಿ ಕಿಟ್‍ಗಳನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಬೆಂಬಲಿಗರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆ.ಆರ್.ಪುರ ಕ್ಷೇತ್ರದ ರಾಮಮೂರ್ತಿ ನಗರ ಸಮೀಪದ ಲೋಟಸ್ ಕನ್ವೆನ್ಷನ್ ಹಾಲ್‍ನಲ್ಲಿ ವಲಸಿಗ ಕಾರ್ಮಿಕರಿಗೆ ವಿತರಿಸಬೇಕಾದ ದಿನಸಿ ಕಿಟ್‍ಗಳನ್ನು ದಾಸ್ತಾನು ಮಾಡಲಾಗಿತ್ತು. ಸರಕಾರದ ಸ್ಟಿಕ್ಕರ್ ಗಳನ್ನು ಕಿತ್ತು ಹಾಕಿ ಬಿಜೆಪಿ ವತಿಯಿಂದ ಹಂಚಲು ಯೋಜಿಸಲಾಗಿತ್ತು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ಸಚಿವರು, ಶಾಸಕರು ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಕಾರ್ಮಿಕ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಬಿಜೆಪಿ ಮುಖಂಡರ ಪ್ರಭಾವಕ್ಕೆ ಒಳಗಾಗಿದ್ದರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಮುಂಬರುವ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದಿನಸಿ ಸಾಮಗ್ರಿಗಳ ಕಿಟ್‍ಗಳನ್ನು ದುರುಪಯೋಗಪಡಿಸಿಕೊಂಡು, ಬಿಜೆಪಿ ಕಾರ್ಯಕರ್ತರಿಗೆ ಹಂಚಿಕೆಯಾಗುತ್ತಿದೆ. ಬಿಜೆಪಿ ಸರಕಾರ ಒಂದು ಕಣ್ಣಿಗೆ ಬೆಣ್ಣೆ ಹಾಗೂ ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ವಲಸೆ, ಕೂಲಿ ಕಾರ್ಮಿಕರಿಗೆ ಹಸಿವು ನೀಗಿಸುವ ಯೋಜನೆಗಳನ್ನು ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸದೆ, ಅವರು ವಲಸೆ ಹೋಗುವಂತೆ ಮಾಡಲಾಗಿದೆ. ಈ ಕ್ಷೇತ್ರದಲ್ಲಿ ಆಗಿರುವ ಅಕ್ರಮದ ಹೊಣೆಗಾರ ನಗರಾಭಿವೃದ್ಧಿ ಸಚಿವ ಭೈರತಿ ಬಸರಾಜ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

ಅಕ್ರಮವಾಗಿ ಈ ದಿನಸಿ ಕಿಟ್‍ಗಳನ್ನು ದಾಸ್ತಾನು ಮಾಡಲು ಕಾರಣಕರ್ತರಾಗಿರುವ ಅಧಿಕಾರಿಗಳನ್ನು ಸರಕಾರ ಅಮಾನತು ಮಾಡಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಆರ್ಟ್ ಆಫ್ ಲೀವಿಂಗ್ ಸಂಸ್ಥೆಯವರು ನೀಡಿದ್ದ ದಿನಸಿ ಕಿಟ್‍ಗಳನ್ನು ಕಾರ್ಮಿಕ ಇಲಾಖೆ ಮೂಲಕ ವಲಸೆ ಕಾರ್ಮಿಕರಿಗೆ ಹಂಚಲು ಉದ್ದೇಶಿಸಲಾಗಿತ್ತು. ನಿನ್ನೆ ಸಂಜೆ ಕಲ್ಯಾಣ ಮಂಟಪದಲ್ಲಿ ಸಂಗ್ರಹಿಸಲಾಗಿದ್ದ ದಿನಸಿ ಕಿಟ್‍ಗಳ ಮೇಲಿನ ಸರಕಾರದ ಸ್ಟಿಕ್ಕರ್ ಗಳನ್ನು ಕಿತ್ತು ಹಾಕಿ ಲಾರಿಯಲ್ಲಿ ಸಾಗಿಸಲು ಯತ್ನಿಸುತ್ತಿದ್ದಾಗ ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರಶ್ನಿಸಿ ವಾಹನವನ್ನು ತಡೆ ಹಿಡಿದಿದ್ದರು.

ನಿನ್ನೆ ರಾತ್ರಿಯೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ವಿಧಾನಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎಂ.ನಾರಾಯಣಸ್ವಾಮಿ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸೇರಿದಂತೆ ಇನ್ನಿತರ ಮುಖಂಡರು ಸ್ಥಳಕ್ಕೆ ಭೇಟಿ ನೀಡಿದ್ದರು. ಅಲ್ಲದೆ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಈ ಪ್ರಕರಣಕ್ಕೆ ಸಂಭವಿಸಿದಂತೆ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)