ಉಡುಪಿ : ಇಂದು 263 ಮಂದಿಗೆ ಕೊರೋನ ಪಾಸಿಟಿವ್, ಕೋವಿಡ್ಗೆ ನಾಲ್ವರು ಬಲಿ
ಉಡುಪಿ, ಆ.12: ಜಿಲ್ಲೆಯಲ್ಲಿ ಬುಧವಾರ ಒಟ್ಟು 263 ಮಂದಿಯಲ್ಲಿ ನೋವೆಲ್ ಕೊರೋನ ವೈರಸ್ನ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಪಾಸಿಟಿವ್ ಕಂಡುಬಂದವರ ಒಟ್ಟು ಸಂಖ್ಯೆ 6,773ಕ್ಕೇರಿದೆ. ಇಂದು ದಿನದಲ್ಲಿ 1179 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿಗಳು ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಕೊರೋನ ಸೋಂಕು ಪತ್ತೆಯಾದ 263 ಮಂದಿಯಲ್ಲಿ ಉಡುಪಿ ತಾಲೂಕಿನ 142 ಮಂದಿ, ಕುಂದಾಪುರ ತಾಲೂಕಿನ 95 ಹಾಗೂ ಕಾರ್ಕಳ ತಾಲೂಕಿನ 23 ಮಂದಿ ಸೇರಿದ್ದಾರೆ. ಉಳಿದ ಮೂವರು ಹೊರಜಿಲ್ಲೆಯ ವರಾಗಿದ್ದು, ಜಿಲ್ಲೆಯಲ್ಲಿ ಚಿಕಿತ್ಸೆಗೆ ಬಂದು ಪಾಸಿಟಿವ್ ಆಗಿದ್ದಾರೆ. ಮಕ್ಕಳು ಸೇರಿದಂತೆ 138 ಮಂದಿ ಪುರುಷರು ಹಾಗೂ 125 ಮಂದಿ ಮಹಿಳೆಯರಲ್ಲಿ ಸೋಂಕು ಕಂಡು ಬಂದಿದೆ. ಇವರಲ್ಲಿ 103 ಪುರುಷರು ಹಾಗೂ 109 ಮಹಿಳೆ ಯರಲ್ಲಿ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಇಂದಿನ 263 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಸಂಖ್ಯೆ 6773ಕ್ಕೇರಿದೆ ಎಂದು ಡಾ.ಸೂಡ ತಿಳಿಸಿದರು.
ಬುಧವಾರ ಕೊರೋನ ಪಾಸಿಟಿವ್ ದೃಢಗೊಂಡ 263 ಮಂದಿಯಲ್ಲಿ 97 ಮಂದಿ ಪಾಸಿಟಿವ್ ಬಂದವರ ಸಂಪರ್ಕದಿಂದ, 34 ಮಂದಿ ಶೀತಜ್ವರ ದಿಂದ ಬಳಲುತಿದ್ದು ಅವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು ನಾಲ್ಕು ಮಂದಿ ದೇಶೀಯ ಪ್ರವಾಸದಿಂದ ಮರಳಿದ್ದು, ಪಾಸಿಟಿವ್ ಕಾಣಿಸಿ ಕೊಂಡಿದೆ. 128 ಮಂದಿಯ ಸೋಂಕಿನ ಸಂಪರ್ಕ ಇನ್ನೂ ತನಿಖೆಯಲ್ಲಿದೆ ಎಂದರು.
198 ಮಂದಿ ಬಿಡುಗಡೆ: ಜಿಲ್ಲೆಯಲ್ಲಿ ಬುಧವಾರ ಒಟ್ಟು 198 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡು ಬಿಡುಗಡೆಗೊಂಡಿದ್ದಾರೆ. ಇವರಲ್ಲಿ 116 ಮಂದಿ ಕೋವಿಡ್ ಆಸ್ಪತ್ರೆಗಳಿಂದ, 82 ಮಂದಿ ಹೋಮ್ ಐಸೋಲೇಷನ್ ನಲ್ಲಿದ್ದು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 3,966ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 2738 ಮಂದಿ ಚಿಕಿತ್ಸೆಯಲ್ಲಿದ್ದು, ಇವರಲ್ಲಿ 1448 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 1290 ಮಂದಿ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್ಓ ಹೇಳಿದರು.
1577 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಬುಧವಾರ 1577 ಮಂದಿಯ ಗಂಟಲುದ್ರವದ ಸ್ಯಾಂಪಲ್ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 660 ಮಂದಿ, ಕೋವಿಡ್ ಸಂಪರ್ಕಿತರು 464 ಮಂದಿ ಇದ್ದರೆ, ಉಸಿರಾಟ ತೊಂದರೆಯ ಇಬ್ಬರು, ಶೀತಜ್ವರ ದಿಂದ ಬಳಲುವ 53 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್ಸ್ಪಾಟ್ಗಳಿಂದ ಆಗಮಿಸಿದ 398 ಮಂದಿಯ ಸ್ಯಾಂಪಲ್ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.
ಇಂದು ಪಡೆದ 1577 ಸ್ಯಾಂಪಲ್ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 49,096ಕ್ಕೇರಿದೆ. ಇವುಗಳಲ್ಲಿ ಈವರೆಗೆ 40,578 ನೆಗೆಟಿವ್, 6773 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 69 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 1745 ಸ್ಯಾಂಪಲ್ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.
ಜಿಲ್ಲೆಯಲ್ಲಿ ಮಂಗಳವಾರ 263 ಮಂದಿಯನ್ನು ಆಸ್ಪತ್ರೆಗಳ ಐಸೋಲೇಷನ್ ವಾರ್ಡ್ಗೆ ದಾಖಲಿಸಲಾಗಿದೆ.ಇವರಲ್ಲಿ ಒಟ್ಟು 171 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಹಾಗೂ 92 ಮಂದಿ ಹೋಮ್ ಐಸೋಲೇಷನ್ನಲ್ಲಿ ಇದ್ದಾರೆ. ಜಿಲ್ಲೆಯಲ್ಲಿ ಈಗ ಒಟ್ಟು 1954 ಮಂದಿ ಹೋಮ್ ಐಸೋಲೇಷನ್ ಚಿಕಿತ್ಸೆಯಲ್ಲಿ ದ್ದಾರೆ ಎಂದು ಅವರು ಹೇಳಿದರು.
ಕೋವಿಡ್ಗೆ ನಾಲ್ವರು ಬಲಿ
ಉಡುಪಿ ಜಿಲ್ಲೆಯಲ್ಲಿ ಇಂದು ನಾಲ್ವರು ಕೋವಿಡ್-19 ಸೋಂಕಿನೊಂದಿಗೆ ಮೃತಪಟ್ಟಿದ್ದಾರೆ. ಉಡುಪಿ ತಾಲೂಕಿನ 66ರ ಹರೆಯದ ಪುರುಷ ಕಿನಿ ಸಮಸ್ಯೆಯಿಂದ, 35ರ ಹರೆಯದ ಯುವಕ ಕ್ಯಾನ್ಸರ್ನಿಂದ ಹಾಗೂ ಕಾರ್ಕಳದ 81ರ ಹರೆಯದ ವೃದ್ಧರು ಮಧುಮೇಹ, ನ್ಯುಮೋನಿಯಾ, ಹೃದಯದ ಸಮಸ್ಯೆಗಳಿಗೆ ಚಿಕಿತ್ಸೆಗೆ ಸೇರಿದ್ದು, ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ.
ಅಲ್ಲದೇ ಕಿರಿಮಂಜೇಶ್ವರದ 55ರ ಹರೆಯದ ಪುರುಷರೊಬ್ಬರು, ರಕ್ತದೊತ್ತಡ, ಉಬ್ಬಸದಿಂದ ಇಂದು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.