varthabharthi


ಕರ್ನಾಟಕ

ರೋರಿಚ್ ಎಸ್ಟೇಟಿನ ಬದಲು ಹೆಸರಘಟ್ಟದಲ್ಲಿಯೇ ಫಿಲ್ಮ್ ಸಿಟಿ ನಿರ್ಮಾಣ: ಅಶ್ವತ್ಥನಾರಾಯಣ

ವಾರ್ತಾ ಭಾರತಿ : 14 Aug, 2020

ಬೆಂಗಳೂರು, ಆ.13: ಫಿಲ್ಮ್ ಸಿಟಿಯನ್ನು ರೋರಿಚ್ ಎಸ್ಟೇಟಿನ ಬದಲು ಹೆಸರಘಟ್ಟದಲ್ಲಿಯೇ ನಿರ್ಮಾಣ ಮಾಡಲಾಗುವುದು. ಜತೆಗೆ ಕೊರೋನದಿಂದ ತೀವ್ರ ಸಂಕಷ್ಟಕ್ಕೆ ಗುರಿ ಆಗಿರುವ ಚಿತ್ರರಂಗದ ಪುನಶ್ಚೇತನಕ್ಕೆ ಎಲ್ಲ ರೀತಿಯ ನೆರವೂ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಡಾ. ಶಿವರಾಜ್ ಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ಕನ್ನಡ ಚಿತ್ರರಂಗದ ನಿಯೋಗದ ಜತೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ರೋರಿಚ್ ಎಸ್ಟೇಟಿನಲ್ಲಿ ಪರಿಸರಾತ್ಮಕ ಸಮಸ್ಯೆಗಳು ಎದುರಾದವು. ಹೀಗಾಗಿ ಅಲ್ಲಿ ಈ ಯೋಜನೆ ಸಾಧ್ಯವಾಗುತ್ತಿಲ್ಲ ಎಂದರು.

ಹೆಸರಘಟ್ಟದಲ್ಲಿ ಪಶುಸಂಗೋಪನಾ ಇಲಾಖೆಯ 450 ಎಕರೆ ಭೂಮಿ ಇದ್ದು, ಅದರಲ್ಲಿ 150 ಎಕರೆಯನ್ನು ಫಿಲ್ಮ್ ಸಿಟಿ ನಿರ್ಮಾಣಕ್ಕೆ ನೀಡಲಾಗುವುದು. ಅಲ್ಲಿ ಫಿಲ್ಮ್ ಸಿಟಿಗೆ ಸಂಪರ್ಕಕ್ಕೆ ಬೇಕಾದ ರಸ್ತೆಯೊಂದನ್ನು ಮಾಡಿ ಆ ಜಾಗವನ್ನು ಫಿಲ್ಮ್ ಸಿಟಿಗೆ ಹಸ್ತಾಂತರ ಮಾಡಲಾಗುವುದು. ಈಗಾಗಲೇ ಇದಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳು ನಡೆಯುತ್ತಿವೆ. ಆದಷ್ಟು ತ್ವರಿತವಾಗಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಕೊರೋನ ಕಾರಣದಿಂದ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶಿವರಾಜ್ ಕುಮಾರ್ ಅವರ ಜತೆ ವಿವರವಾಗಿ ಚರ್ಚೆ ಮಾಡಲಾಗಿದೆ. ಮುಂದಿನ ವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಮಸ್ಯೆಗಳ ಪರಿಹಾರದ ಬಗ್ಗೆ ಮಾತುಕತೆ ನಡೆಸಲಾಗುವುದು. ಅದಕ್ಕೆ ಪೂರ್ವಭಾವಿಯಾಗಿ ಇವತ್ತು ಸಭೆ ನಡೆದಿದೆ. ಸಿಎಂ ಅವರ ಜತೆ ಮಾತುಕತೆಯ ನಂತರ ಚಿತ್ರರಂಗದ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಹೇಳಿದರು.

ಚಿತ್ರರಂಗದಲ್ಲಿ ಅಸಂಘಟಿತ ದಿನಗೂಲಿ ನೌಕರರ ಹಿತ ಕಾಯುವ ಬಗ್ಗೆ ಆದಷ್ಟು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು. ಅವರನ್ನು ಕಾರ್ಮಿಕ ಇಲಾಖೆ ಅಡಿಗೆ ತಂದು ಸರಕಾರದ ಸವಲತ್ತುಗಳು ಅವರಿಗೂ ಸಿಗುವಂತೆ ನೋಡಿಕೊಳ್ಳಲಾಗುವುದು. ಪ್ರದರ್ಶಕ ವಲಯದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ಕಾರ್ಮಿಕರಿಗೂ ಸರಕಾರ ಸಹಾಯ ಹಸ್ತ ಚಾಚಲಿದೆ. ಈ ಬಗ್ಗೆ ಸಂಬಂಧಪಟ್ಟವರ ಜತೆ ಆದಷ್ಟು ಬೇಗ ಚರ್ಚೆ ಮಾಡಲಾಗುವುದು. ಇದರ ಜತೆಗೆ ಸಕಾಲದಲ್ಲಿ ಸಬ್ಸಿಡಿ ಸಿಗುವಂತೆ ಮಾಡುವುದು, ಆ ಸಬ್ಸಿಡಿ ಪ್ರಮಾಣವನ್ನು ಹೆಚ್ಚಿಸುವುದು, ಜಿಎಸ್‍ಟಿ ವಿಚಾರದಲ್ಲಿ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳನ್ನು ಹೋಗಲಾಡಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಶಿವರಾಜ್ ಕುಮಾರ್ ಅವರು, ಕೊರೋನ ಕಾರಣಕ್ಕೆ ಚಿತ್ರರಂಗ ಕಂಗೆಟ್ಟಿದೆ. ಸರಕಾರವೇ ನಮ್ಮ ಚಿತ್ರರಂಗವನ್ನು ರಕ್ಷಿಸಬೇಕು. ಈಗಾಗಲೇ ಹಲವು ಸುತ್ತಿನ ಮಾತುಕತೆಗಳು ನಡೆದಿವೆ. ಉಪ ಮುಖ್ಯಮಂತ್ರಿಗಳ ಜತೆ ನಡೆಸಿದ ಮಾತುಕತೆ ಸಕಾರಾತ್ಮಕವಾಗಿತ್ತು. ಮುಂದಿನ ವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ನಿರ್ಮಾಪಕ ಕೆ.ಪಿ. ಶ್ರೀಕಾಂತ್, ಕೆಜಿಎಫ್ ಚಿತ್ರದ ಸಹ ನಿರ್ಮಾಪಕ ಕಾರ್ತಿಕ್ ಮುಂತಾದವರು ಪಾಲ್ಗೊಂಡಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)