varthabharthi


ಕರ್ನಾಟಕ

ಸಾಹಿತಿ ಎಸ್.ಎಲ್.ಭೈರಪ್ಪರಿಂದ ಉದ್ಘಾಟನೆ

ದುಂದು ವೆಚ್ಚವಿಲ್ಲದೆ ಸರಳ 'ಮೈಸೂರು ದಸರಾ’ ಆಚರಣೆ: ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾ ಭಾರತಿ : 14 Aug, 2019

ಬೆಂಗಳೂರು, ಆ. 14: ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ನಾಡಹಬ್ಬ ‘ಮೈಸೂರು ದಸರಾ’ ಉತ್ಸವವನ್ನು ಈ ಬಾರಿ ದುಂದುವೆಚ್ಚವಿಲ್ಲದೆ ಸರಳ ರೀತಿಯಲ್ಲಿ ಸಾಂಪ್ರದಾಯಿಕವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತನ್ನ ಅಧ್ಯಕ್ಷತೆಯಲ್ಲಿ ನಡೆದ ಮೈಸೂರು ದಸರಾ ಆಚರಣೆ ಸಂಬಂಧದ ಉನ್ನತ ಮಟ್ಟದ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ಮೈಸೂರು ದಸರಾ ನಮ್ಮ ನಾಡಿನ ಸಂಸ್ಕೃತಿ, ಪರಂಪರೆಯನ್ನು ಎತ್ತಿ ಹಿಡಿಯುವ ಹಬ್ಬ. ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ತನ್ನದೆ ಕೊಡುಗೆ ನೀಡುತ್ತಿದೆ. ಈ ಸಂದರ್ಭದಲ್ಲಿ ಮೈಸೂರು ಮತ್ತು ಸುತ್ತಮುತ್ತಲ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಇದರಿಂದ ಈ ಭಾಗದ ಆರ್ಥಿಕತೆಗೆ ಅನುಕೂಲವಾಗುತ್ತಿದೆ ಎಂದು ಅವರು ತಿಳಿಸಿದರು.

ಭಾರೀ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನತೆ ಸಂಕಷ್ಟದಲ್ಲಿದ್ದಾರೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಮೈಸೂರು ದಸರಾವನ್ನು ದುಂದು ವೆಚ್ಚವಿಲ್ಲದೆ ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಭೈರಪ್ಪರಿಂದ ದಸರಾ ಉದ್ಘಾಟನೆ: ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ನೆರವೇರಿಸಬೇಕೆನ್ನುವುದು ಎಲ್ಲರ ಒಮ್ಮತದ ಅಭಿಪ್ರಾಯವಾಗಿದ್ದು, ಭೈರಪ್ಪನವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ರಾಜರ್ಷಿ ಜಯಚಾಮರಾಜ ಒಡೆಯರ್‌ರವರ ಜನ್ಮಶತಮಾನೋತ್ಸವವನ್ನು ರಾಜ್ಯ ಸರಕಾರದ ವತಿಯಿಂದ ಆಚರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ದಸರಾ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ರೂಪಿಸಿ, ವ್ಯವಸ್ಥಿತವಾಗಿ ಆಯೋಜಿಸಲು ಪೂರ್ವಸಿದ್ಧತೆ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ದಸರಾ ಆಯೋಜನೆಗೆ ಈ ವರ್ಷ 20.50 ಕೋಟಿ ರೂ.ಗಳ ಅನುದಾನ ನೀಡಲಾಗುವುದು. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೊರರಾಜ್ಯಗಳ ಕಲಾವಿದರನ್ನು ಆಹ್ವಾನಿಸದೆ, ರಾಜ್ಯದ ಪ್ರತಿಭಾವಂತ ಕಲಾವಿದರನ್ನು ಆಹ್ವಾನಿಸಬೇಕು ಎಂದು ಅವರು ಸೂಚಿಸಿದರು.

ಸಂಸದರಾದ ಪ್ರತಾಪ್ ಸಿಂಹ, ವಿ.ಶ್ರೀನಿವಾಸ ಪ್ರಸಾದ್, ಶಾಸಕರಾದ ತನ್ವೀರ್ ಸೇಠ್, ರಾಮದಾಸ್, ಎನ್.ಮಹೇಶ್, ಡಾ.ಯತೀಂದ್ರ. ಎಲ್. ನಾಗೇಂದ್ರ, ಪರಿಷತ್ ಸದಸ್ಯ ಎಸ್.ನಾಗರಾಜ್, ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಕಾರ್ಯದರ್ಶಿ ಶಿವಯೋಗಿ ಕಳಸದ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)