varthabharthi


ಕರ್ನಾಟಕ

ಕುಮಾರಸ್ವಾಮಿ ಸರಕಾರದಲ್ಲಿ ಫೋನ್ ಕದ್ದಾಲಿಕೆ ಆರೋಪ: ಡಿ.ಕೆ.ಶಿವಕುಮಾರ್ ಹೇಳಿದ್ದು ಹೀಗೆ...

ವಾರ್ತಾ ಭಾರತಿ : 14 Aug, 2019

ಬೆಂಗಳೂರು, ಆ. 14: ‘ರಾಜ್ಯದಲ್ಲಿನ ಭಾರೀ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ’ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಒತ್ತಾಯ ಮಾಡಿದ್ದಾರೆ.

ಬುಧವಾರ ಸದಾಶಿವನಗರದಲ್ಲಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನೆರೆ ಸಂತ್ರಸ್ತರಿಗೆ 5 ಸಾವಿರ ರೂ.ಬಾಡಿಗೆ ನೀಡುತ್ತೇವೆ. ಮನೆ ದುರಸ್ತಿಗೆ 1ಲಕ್ಷ ರೂ., ಸಂಪೂರ್ಣ ಮನೆ ಬಿದ್ದವರಿಗೆ 5 ಲಕ್ಷ ರೂ. ನೀಡುತ್ತೇವೆ ಎಂದು ಭರವಸೆ ನೀಡಿದ್ದು, ಸಿಎಂ ಆ ಮಾತು ಉಳಿಸಿಕೊಳ್ಳಬೇಕು ಎಂದರು.

ನೆರೆ ಸಂತ್ರಸ್ತರಿಗೆ ಸ್ಪಂದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ರಾಜಕಾರಣ ಮಾಡುವುದಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಧಿಕಾರವನ್ನು ಬಳಸಿ ಕೂಡಲೆ ಸಂತ್ರಸ್ತರಿಗೆ ಚೆಕ್ ವಿತರಣೆ ಮಾಡಬೇಕು ಎಂದು ಶಿವಕುಮಾರ್ ಆಗ್ರಹಿಸಿದರು.

ಫೋನ್ ಕದ್ದಾಲಿಕೆ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಟೆಲಿಫೋನ್ ಕದ್ದಾಲಿಕೆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ಬಗ್ಗೆ ಕೂಡಲೇ ಮಾಹಿತಿ ಪಡೆದುಕೊಂಡ ಬಳಿಕ ಪ್ರತಿಕ್ರಿಯೆ ನೀಡುವೆ ಎಂದು ಶಿವಕುಮಾರ್ ಸ್ಪಷ್ಟನೆ ನೀಡಿದರು.

‘ದೇಶಕ್ಕೆ ಸ್ವಾತಂತ್ರ ಬಂದ ಬಳಿಕ ಇದೇ ಮೊದಲ ಬಾರಿಗೆ ಸಚಿವರಿಲ್ಲದೆ ಸ್ವಾತಂತ್ರೋತ್ಸವ ಧ್ವಜಾರೋಹಣ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾಧಿಕಾರಿಗಳು, ತಹಶೀಲ್ದಾರರು ಧ್ವಜಾರೋಹಣ ಮಾಡುವುದನ್ನು ನೋಡಿದರೆ ರಾಜ್ಯಪಾಲರ ಆಡಳಿತದಂತೆ ಭಾಸವಾಗುತ್ತಿದೆ’

-ಡಿ.ಕೆ.ಶಿವಕುಮಾರ್, ಮಾಜಿ ಸಚಿವ

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)