varthabharthi


ಬೆಂಗಳೂರು

ಸ್ಮಾರ್ಟ್ ಪಾರ್ಕಿಂಗ್ ಯೋಜನೆಗೆ ಚಾಲನೆ: ಬಿಬಿಎಂಪಿಗೆ ವಾರ್ಷಿಕ 31.56 ಕೋಟಿ ರೂ. ಆದಾಯ

ವಾರ್ತಾ ಭಾರತಿ : 19 Sep, 2020

ಬೆಂಗಳೂರು, ಸೆ.19: ಬಿಬಿಎಂಪಿಯಿಂದ ಯಾವುದೇ ಹಣ ವ್ಯಯಿಸದೆ ಖಾಸಗಿ ಸಹಭಾಗಿತ್ವದಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದರಿಂದ ಪಾಲಿಕೆಗೆ ವಾರ್ಷಿಕ 31.56 ಕೋಟಿ ರೂ. ಆದಾಯ ಬರಲಿದೆ ಎಂದು ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ತಿಳಿಸಿದರು.

ಶನಿವಾರ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಸ್ಮಾರ್ಟ್ ಪಾರ್ಕಿಂಗ್ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯ ಕೇಂದ್ರ ವಾಣಿಜ್ಯ ಪ್ರದೇಶ(ಸಿಬಿಡಿ)ಗಳಲ್ಲಿ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಸ್ಮಾರ್ಟ್ ಪಾರ್ಕಿಗ್ ಯೋಜನೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಮಾಟ್ ಪಾರ್ಕಿಂಗ್ ಯೋಜನೆಗೆ ಇಂದು 10 ಕಡೆ ಚಾಲನೆ ನೀಡಲಾಗಿದೆ. ತಂತ್ರಜ್ಞಾನ ಆಧಾರಿತ ಹಾಗೂ ಸುಲಭ ರೀತಿಯಲ್ಲಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಅದಕ್ಕಾಗಿ 'ನಮ್ಮ ಬೆಂಗಳೂರು ಸ್ಮಾರ್ಟ್ ಪಾರ್ಕಿಂಗ್' ತಂತ್ರಾಂಶವನ್ನು ಸಿದ್ಧಪಡಿಸಲಾಗಿದೆ. ತಂತ್ರಾಂಶದ ಮೂಲಕ ಪಾರ್ಕಿಂಗ್ ಮಾಡಿ ಪಾರ್ಕಿಂಗ್ ಮೀಟರ್ ಮೂಲಕ ನಿಗದಿತ ಸಮಯಕ್ಕೆ ಶುಲ್ಕ ಪಾವತಿಸಿ ರಶೀದಿ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ನಗರದಲ್ಲಿ ಕೇಂದ್ರ ಭಾಗದ ರಸ್ತೆಗಳಲ್ಲಿ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪಾಲಿಕೆಯು ಆಯ್ದ 87 ರಸ್ತೆಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ಯೋಜನೆ ಜಾರಿಗೊಳಿಸುತ್ತಿದೆ ಎಂದರು.

ಖಾಸಗಿ ಸಹಭಾಗಿತ್ವದಲ್ಲಿ ಸೆಂಟ್ರಲ್ ಪಾರ್ಕಿಂಗ್ ಸರ್ವೀಸಸ್ ಸಂಸ್ಥೆ ಮೂಲಕ ಸ್ಮಾರ್ಟ್ ಪಾರ್ಕಿಂಗ್ ಯೋಜನೆ ಜಾರಿಗೊಳಿಸುತ್ತಿದ್ದು, ಆ ಸಂಸ್ಥೆಯೇ ನಿರ್ವಹಣೆ ಮಾಡಲಿದೆ. ಪಾಲಿಕೆಯಿಂದ ಇದಕ್ಕೆ ಯಾವುದೇ ಹಣ ವ್ಯಯಿಸುತ್ತಿಲ್ಲ ಎಂದು ತಿಳಿಸಿದರು.

ಸ್ಮಾರ್ಟ್ ಪಾರ್ಕಿಂಗ್ ರಸ್ತೆಗಳು

ಕನ್ನಿಂಗ್ ಹ್ಯಾಮ್ ರಸ್ತೆ, ಎಂ.ಜಿ.ರಸ್ತೆ, ಕಸ್ತೂರು ಬಾ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಮ್ಯೂಸಿಯಂ ಕ್ರಾಸ್ ರಸ್ತೆ, ವಿಟ್ಟಲ್ ಮಲ್ಯ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆ, ಚರ್ಚ್ ಸ್ಟ್ರೀಟ್, ಅಲಿ ಅಸ್ಕರ್ ರಸ್ತೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)