varthabharthi


ಕರ್ನಾಟಕ

ಜ.28ರಿಂದ ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ

ವಾರ್ತಾ ಭಾರತಿ : 13 Jan, 2021

ಬೆಂಗಳೂರು, ಜ. 13: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಜ.28ರ ಗುರುವಾರದಿಂದ ಫೆಬ್ರವರಿ 5ರವರೆಗೆ ನಡೆಸಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಮಾಡಿದೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೇಲ್ಕಂಡ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜ.28ರಂದು ರಾಜ್ಯಪಾಲ ವಜೂಭಾಯಿ ವಾಲಾ ಅವರು ವಿಧಾನ ಮಂಡಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆ ಬಳಿಕ ಉಳಿದಂತೆ ಅಧಿವೇಶನ ಕಲಾಪ ನಡೆಯಲಿದೆ ಎಂದು ಮಾಧುಸ್ವಾಮಿ ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಮಾರ್ಚ್ ತಿಂಗಳಲ್ಲಿ ಬಜೆಟ್ ಅಧಿವೇಶನ ನಡೆಸಲು ತಾತ್ಕಾಲಿಕ ನಿರ್ಧಾರ ಕೈಗೊಳ್ಳಲಾಗಿದ್ದು, ಇನ್ನೂ ದಿನಾಂಕ ಅಂತಿಮಗೊಳಿಸಿಲ್ಲ. ಜಂಟಿ ಅಧಿವೇಶನದಲ್ಲಿ ಮುಂದಿನ ಬಜೆಟ್ ಕುರಿತು ಹಾಗೂ ಪ್ರಾಸ್ತಾವಿತ ಯೋಜನೆಗಳ ಕುರಿತು ಚರ್ಚೆ ನಡೆಯಲಿದೆ.

ಜ.28ರಿಂದ ಫೆಬ್ರವರಿ 5ರವರೆಗೆ ರಜಾ(ಶನಿವಾರ/ರವಿವಾರ) ದಿನಗಳನ್ನು ಹೊರತುಪಡಿಸಿ ಒಟ್ಟು 7 ದಿನಗಳ ಕಾಲ ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ಅವರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆ ನಡೆಯಲಿದೆ.

ಸಚಿವ ಸಂಪುಟ ವಿಸ್ತರಣೆ, ಮಂತ್ರಿ ಸ್ಥಾನ ಕೈತಪ್ಪಿದ ಆಕಾಂಕ್ಷಿಗಳಲ್ಲಿನ ಮಡುಗಟ್ಟಿದ ಅಸಮಾಧಾನ, ರಾಜ್ಯ ಸರಕಾರದ ಆಡಳಿತ ವೈಫಲ್ಯಗಳು ಸೇರಿದಂತೆ ಇನ್ನಿತರ ವಿಚಾರಗಳು ಜಂಟಿ ಅಧಿವೇಶನದಲ್ಲಿ ಪ್ರಸ್ತಾಪವಾಗುವ ಸಾಧ್ಯತೆಗಳಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಕ್ಕೆ ವೇದಿಕೆ ಸಜ್ಜುಗೊಳ್ಳಲಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)