ಬೆಂಗಳೂರು
ಬ್ಲ್ಯಾಕ್ ಫಂಗಸ್‌ಗೆ ರಾಜ್ಯದ ಆರು ಕಡೆ ಉಚಿತ ಚಿಕಿತ್ಸೆ: ಡಿಸಿಎಂ ಡಾ.ಅಶ್ವತ್ಥನಾರಾಯಣ

ಬೆಂಗಳೂರು, ಮೇ 19: ಬ್ಲ್ಯಾಕ್ ಫಂಗಸ್ ಕಾಯಿಲೆಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಸೇರಿದಂತೆ ರಾಜ್ಯದ ಆರು ಕಡೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಚಿಕಿತ್ಸೆಗೆ ಬಳಸಲಾಗುವ ಔಷಧಿಗೆ ರಾಜ್ಯದಲ್ಲಿ ಕೊರತೆ ಇಲ್ಲ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಬಂಟರ ಸಂಘವು ಹೋಮ್ ಐಸೋಲೇಷನ್ ಆಗಿರುವ ಕೋವಿಡ್ ಸೋಂಕಿತರಿಗಾಗಿ ವ್ಯವಸ್ಥೆ ಮಾಡಿರುವ 20 ಆಮ್ಲಜನಕ ಸಾಂದ್ರಕಗಳ ವ್ಯವಸ್ಥೆಗೆ ಚಾಲನೆ ಕೊಟ್ಟ ನಂತರ ಮಾಧ್ಯಮಗಳ ಜತೆ ಅವರು ಮಾತನಾಡುತ್ತಿದ್ದರು.
ಬ್ಲ್ಯಾಕ್ ಫಂಗಸ್ ನ ಚಿಕಿತ್ಸೆಗೆ ಈಗಾಗಲೇ ಕೇಂದ್ರದಿಂದ 1000 ವೈಲ್ಸ್ ಬಂದಿದೆ. ಈ ಔಷಧಿಯ ಕೊರತೆ ನೀಗಿಸಲು ಸರಕಾರ ಸರ್ವ ಪ್ರಯತ್ನವನ್ನೂ ಮಾಡುತ್ತಿದೆ. ಎಲ್ಲಿಯೂ ಔಷಧಿ ಕೊರತೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಕೇಂದ್ರದಿಂದ ಇನ್ನೂ ಹೆಚ್ಚಿನ ಔಷಧಿ ಪಡೆಯಲು ಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.
ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ, ಕಾರ್ಯದರ್ಶಿ ಮಧುಕರ ಶೆಟ್ಟಿ, ಉಮೇಶ ಶೆಟ್ಟಿ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಬೇಲೂರು, ಸಂಘದ ವೈದ್ಯಕೀಯ ವಿಭಾಗದ ಅಧ್ಯಕ್ಷ ಡಾ.ನಿಶಾಕಾಂತ್ ಶೆಟ್ಟಿ ಮುಂತಾದವರು ಈ ಸಂದರ್ಭ ಉಪಸ್ಥಿತರಿದ್ದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ










