varthabharthi


ರಾಷ್ಟ್ರೀಯ

ಆರ್ಥಿಕ ದುರ್ಬಲ ವರ್ಗಗಳಿಗೆ ಶೇ.10 ಮೀಸಲಾತಿ ವಿರುದ್ಧ ಅರ್ಜಿ: ಕೇರಳ ಹೈಕೋರ್ಟ್ ನಲ್ಲಿ ವಿಚಾರಣೆಗೆ ಸುಪ್ರೀಂ ತಡೆಯಾಜ್ಞೆ

ವಾರ್ತಾ ಭಾರತಿ : 24 Sep, 2021

ಹೊಸದಿಲ್ಲಿ, ಸೆ.24: ಮಹತ್ವದ ಬೆಳವಣಿಗೆಯೊಂದರಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಉದ್ಯೋಗ ಹಾಗೂ ಪ್ರವೇಶಾತಿಯಲ್ಲಿ ಶೇ.10 ಮೀಸಲಾತಿಯನ್ನು ನೀಡುವ ಕೇಂದ್ರ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್ ಮುಂದೆ ಸಲ್ಲಿಸಲಾದ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

ಈ ಪ್ರಕರಣವನ್ನು ಕೇರಳ ಹೈಕೋರ್ಟ್ನಿಂದ, ಈಗಾಗಲೇ ಇಂತಹದೇ ಪ್ರಕರಣವನ್ನು ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ನ ಪಂಚಸದಸ್ಯ ಸಾಂವಿಧಾನಿಕ ಪೀಠಕ್ಕೆ ಪ್ರಸ್ತಾವಿಸಬೇಕೆಂದು ಕೋರಿ ಕೇಂದ್ರ ಸರಕಾರ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ನೋಟಿಸ್ ಜಾರಿಗೊಳಿಸಿದೆ.

ಕೇಂದ್ರ ಸರಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪ್ರಕರಣಕ್ಕೆ ಸಂಬಂಧಿಸಿ ಕೇರಳ ಹೈಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣಾ ಕಲಾಪಗಳಿಗೆ ತಡೆಯಾಜ್ಞೆ ನೀಡಬೇಕು ಹಾಗೂ ಅಲ್ಲಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿರುವ ನುಜೈಮ್ ಪಿ.ಕೆ. ಅವರಿಗೆ ನೋಟಿಸ್ ಜಾರಿಗೊಳಿಸುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹಾಗೂ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠವು ನೋಟಿಸ್ ಜಾರಿಗೊಳಿಸಿದೆ.

2019ರ ಸಂವಿಧಾನದ 103ನೇ ತಿದ್ದುಪಡಿಯು ಭಾರತೀಯ ಸಂವಿಧಾನದ ಮೂಲಭೂತ ಸಂರಚನೆಯನ್ನು ಉಲ್ಲಂಘಿಸಿದೆಯೇ ಹಾಗೂ ಅದು ಸಂವಿಧಾನದ ಮೂಲಭೂತ ತತ್ವಗಳಿಗೆ ವಿರುದ್ಧವಾಗಿದೆಯೇ ಎಂಬ ಅನನ್ಯವಾದ ಕಾನೂನು ಪ್ರಶ್ನೆಯನ್ನು ಈ ರಿಟ್ ಅರ್ಜಿಯು ನ್ಯಾಯಾಲಯದ ಮುಂದಿರಿಸಿದೆ ’’ ಎಂದು ನ್ಯಾಯಪೀಠ ಅಭಿಪ್ರಾಯಿಸಿತು.

ಈ ರಿಟ್ ಅರ್ಜಿಯನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸುವುದರಿಂದ, ಈ ವಿಷಯವಾಗಿ ಸಲ್ಲಿಸಲಾದ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ಜೊತೆಯಾಗಿ ನಡೆಸಲು ಸಾಧ್ಯವಾಗಲಿದೆ ಎಂದು ವಿವಿಧ ನ್ಯಾಯಾಲಯಗಳಲ್ಲಿ ನೀಡುವ ಆದೇಶಗಳಲ್ಲಿ ಅಸಂಗತತೆಯಿರುವುದನ್ನು ತಪ್ಪಿಸಲು ಸಾಧ್ಯವಾಗಲಿದೆ ಎಂದು ಸುಪ್ರೀಂಕೋರ್ಟ್ ನ್ಯಾಯಪೀಠ ತಿಳಿಸಿದೆ.

ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಗಳಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿ  ನೀಡುವ ಕೇಂದ್ರ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಹಾಗೂ ಕೇರಳ ಹೈಕೋರ್ಟ್ನಲ್ಲಿರುವ ಅರ್ಜಿಯ ವರ್ಗಾವಣೆಯನ್ನು ಸುಪ್ರೀಂಕೋರ್ಟ್ ಐವರು ಸದಸ್ಯರ ನ್ಯಾಯಪೀಠಕ್ಕೆ ಒಪ್ಪಿಸಿತ್ತು. ಆದರೆ ಕೇಂದ್ರ ಸರಕಾರದ ನಿರ್ಧಾರಕ್ಕೆ ತಡೆಯಾಜ್ಞೆ ನೀಡಲು ನ್ಯಾಯಾಲಯ ನಿರಾಕರಿಸಿದೆ.

ಆರ್ಥಿಕ ದುರ್ಬಲ ವರ್ಗಗಳಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇ.10 ಮೀಸಲಾತಿ ನೀಡುವ ವಿಧೇಯಕಕ್ಕೆ ಲೋಕಸಭೆ ಹಾಗೂ ರಾಜ್ಯಸಭೆಯು ಕ್ರಮವಾಗಿ 2019ರ ಜನವರಿಯ 8 ಹಾಗೂ 9 ರಂದು ಅಂಗೀಕಾರ ನೀಡಿದ್ದವು ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅದಕ್ಕೆ ಸಹಿಹಾಕಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)