varthabharthi


ಕರಾವಳಿ

ಬಂಟ್ವಾಳ; ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ಕು ಮಂದಿ ಪೊಲೀಸ್ ವಶಕ್ಕೆ

ವಾರ್ತಾ ಭಾರತಿ : 9 Oct, 2021

ಬಂಟ್ವಾಳ, ಅ.9: ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶವೊಂದರಲ್ಲಿ ಶುಕ್ರವಾರ 16ರ ಹರೆಯದ ಬಾಲಕಿಯನ್ನು ಪರಿಚಿತನೂ ಒಳಗೊಂಡಿದ್ದ ತಂಡವೊಂದು ಅಪಹರಿಸಿ ಆಕೆಯನ್ನು ಕೊಠಡಿಯೊಂದರಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾಗಿ ದೂರಲಾಗಿದ್ದು ಇದರನ್ವಯ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಘಟನೆ ಕುರಿತ ದೂರಿಗೆ ಸಂಬಂಧಿಸಿ ಬಂಟ್ವಾಳ ನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. ಇವರಲ್ಲಿ ಬಾಲಕಿಗೆ ಪರಿಚಿತ ಶರತ್ ಶೆಟ್ಟಿ ಎಂಬಾತ ಕೂಡಾ ಇದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ಘಟನೆಗೆ ಸಂಬಂಧಿಸಿ ಬಂಟ್ವಾಳ ನಗರ ಠಾಣೆಗೆ ಎಸ್ಪಿ ಋಷಿಕೇಶ್ ಸೋನಾವಣೆ ಭೇಟಿ ನೀಡಿದ್ದು ಬಂಟ್ವಾಳ ಎಎಸ್ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ಬಂಟ್ವಾಳ ಪೊಲೀಸರ ತಂಡದೊಂದಿಗೆ ವಿಚಾರಣೆ ನಡೆಯುತ್ತಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿದ ಎಸ್ಪಿ ಋಷಿಕೇಶ್ ಸೋನಾವಣೆ, ಬಾಲಕಿ ನೀಡಿದ ದೂರಿನ ಆಧಾರದಲ್ಲಿ ಎಫ್.ಐ.ಆರ್. ದಾಖಲು ಮಾಡಲಾಗಿದೆ. ಪ್ರಕರಣದಲ್ಲಿ ಐವರು ಆರೋಪಿಗಳು ಇರುವುದಾಗಿ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ಬಾಲಕಿಯನ್ನು ವಿಚಾರಣೆ ನಡೆಸಿದಾಗ, ಅ.8ರಂದು ಬೆಳಗ್ಗೆ ಮನೆಯಿಂದ ಶಾಲೆಗೆ ನಡೆದುಕೊಂಡು ಹೋಗುತ್ತಿರುವಾಗ ಬಿಳಿ ಕಾರಿನಲ್ಲಿ ಬಂದ ಪರಿಚಿತ ಆರೋಪಿ ಇನ್ನಿತರರೊಂದಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ ತಿಳಿದು ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ಸಂತ್ರಸ್ತೆ ಬಾಲಕಿ ಮಂಗಳೂರು ಸರಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು ಬಾಲಕಿಯ ದೂರಿನಂತೆ ಬಂಟ್ವಾಳ ನಗರ  ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)