varthabharthi


ಕರ್ನಾಟಕ

ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಸರಬರಾಜು: ಸಚಿವ ಬಿ.ಸಿ. ಪಾಟೀಲ್

ವಾರ್ತಾ ಭಾರತಿ : 13 May, 2022

ಬೆಂಗಳೂರು, ಮೇ 13: ರಾಜ್ಯದಲ್ಲಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಪ್ರಾರಂಭವಾಗಿದ್ದು, ರಾಜ್ಯದಲ್ಲಿ ನಿಗದಿತ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಇದ್ದು ಸಕಾಲದಲ್ಲಿ ರೈತರಿಗೆ ಇವುಗಳನ್ನು ತಲುಪಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. 

ಶುಕ್ರವಾರ ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಕಾರ್ಯಗಾರ ಉದ್ದೇಶಿಸಿ ಮಾತನಾಡಿದ ಸಚಿವರು, ಅಧಿಕಾರಿಗಳಿಗೆ ಕಳಪೆ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ಸರಬರಾಜು ಆಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಇಲಾಖೆಯ ಕಾರ್ಯದರ್ಶಿಯಾದ ಶಿವಯೋಗಿ ಕಳಸದ, ಅವರು ಕೃಷಿ ಇಲಾಖೆಯ ಎಲ್ಲ ಕಾರ್ಯಕ್ರಮಗಳಿಗೆ ಸರಕಾರದ ಹಂತದಲ್ಲಿ ಅನುದಾನ ಸಕಾಲಕ್ಕೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದ್ದು ರೈತರಿಗೆ ಇಲಾಖೆ ಕಾರ್ಯಕ್ರಮಗಳನ್ನು ತಲುಪಿಸುವ ಜವಾಬ್ದಾರಿಯನ್ನು ಇಲಾಖೆ ಅಧಿಕಾರಿಗಳು ವಹಿಸಬೇಕೆಂದು ತಿಳಿಸಿದರು.

ಕೃಷಿ ಆಯುಕ್ತರಾದ ಬ್ರಿಜೇಶ್ ಕುಮಾರ್ ದಿಕ್ಷಿತ್ ರವರು ಮಾತನಾಡಿ, ಫಸಲ್ ಭೀಮಾ ಯೋಜನೆ ಮತ್ತು ಬೆಳೆ ಸಮೀಕ್ಷೆ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು ಹಾಗೂ ಬೆಳೆ ಸಮೀಕ್ಷೆಯನ್ನು ರೈತರೇ ಹೆಚ್ಚಾಗಿ ಮಾಡುವಂತೆ ಪ್ರೋತ್ಸಾಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು

ಜಲಾನಯನ ಇಲಾಖೆ ಆಯುಕ್ತರಾದ ವೆಂಕಟೇಶ್ ರವರು ಮಾತನಾಡಿ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ರಾಜ್ಯದ ಎಲ್ಲಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರು, ಉಪ ಕೃಷಿ ನಿರ್ದೇಶಕರು, ಸಹಾಯಕ ಕೃಷಿ ನಿರ್ದೇಶಕರು ಸದರಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಕೃಷಿ ಇಲಾಖೆಯ ನಿರ್ದೇಶಕರಾದ ನಂದಿನಿ ಕುಮಾರಿ ಅವರು ಗಣ್ಯರನ್ನು ಸ್ವಾಗತಿಸಿದರು. ಕೃಷಿ ವಿಶ್ವವಿದ್ಯಾಲಯದ ಕುಲಪತಿ ರಾಜೇಂದ್ರಪ್ರಸಾದ್, ಕೃಷಿ ಇಲಾಖೆ ಹಿರಿಯ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಕೃಷಿ ಇಲಾಖೆಯ ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕೊನೆಯದಾಗಿ ಬಿ. ಶಿವರಾಜು, ಅಪರ ಕೃಷಿ ನಿರ್ದೇಶಕರು (ಬೆಳೆ ಅಭಿವೃದ್ಧಿ ಮತ್ತು ಯೋಜನೆ) ವಂದನಾರ್ಪಣೆ ಮಾಡಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)

ಟಾಪ್ ಸುದ್ದಿಗಳು