varthabharthi


ಕ್ರೀಡೆ

ದಕ್ಷಿಣ ಆಫ್ರಿಕಾ ವಿರುದ್ಧ ಟ್ವೆಂಟಿ-20 ಸರಣಿ: ಮೊದಲ ಬಾರಿ ಟೀಮ್ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಉಮ್ರಾನ್ ಮಲಿಕ್

ವಾರ್ತಾ ಭಾರತಿ : 22 May, 2022

ಹೊಸದಿಲ್ಲಿ, ಮೇ 22: ದಕ್ಷಿಣ ಆಫ್ರಿಕಾ ವಿರುದ್ಧ ಸ್ವದೇಶದಲ್ಲಿ ನಡೆಯಲಿರುವ 5 ಪಂದ್ಯಗಳ ಟ್ವೆಂಟಿ-20 ಸರಣಿಗೆ ಆಯ್ಕೆ ಸಮಿತಿಯು ರವಿವಾರ ಟೀಮ್ ಇಂಡಿಯಾವನ್ನು ಪ್ರಕಟಿಸಿದ್ದು, ಐಪಿಎಲ್‌ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಅತ್ಯಂತ ವೇಗದ ಬೌಲಿಂಗ್ ಮೂಲಕ ಮಿಂಚುತ್ತಿರುವ ಉದಯೋನ್ಮುಖ ವೇಗದ ಬೌಲರ್ ಉಮ್ರಾನ್ ಮಲಿಕ್ ಮೊದಲ ಬಾರಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಟ್ವೆಂಟಿ-20 ಸರಣಿಯು ಜೂನ್ 9ರಂದು ದಿಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆರಂಭವಾಗಲಿದೆ.
 
ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಜಸ್‌ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಈ ವರ್ಷದ ಐಪಿಎಲ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿರುವ ಯುವಕರಿಗೆ ಅವಕಾಶ ಕಲ್ಪಿಸಲಾಗಿದೆ. ಕೆ.ಎಲ್.ರಾಹುಲ್ ನೇತೃತ್ವದ 18ಸದಸ್ಯರನ್ನು ಒಳಗೊಂಡ ಟ್ವೆಂಟಿ-20 ತಂಡಕ್ಕೆ ಜಮ್ಮು ವೇಗದ ಬೌಲರ್ ಉಮ್ರಾನ್ ಮಲಿಕ್ ಸ್ಥಾನ ಪಡೆದಿದ್ದಾರೆ.

ಈ ವರ್ಷದ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಅಮೋಘ ಪ್ರದರ್ಶನ ನೀಡಿದ್ದ ಹಿರಿಯ ವಿಕೆಟ್‌ಕೀಪರ್ ದಿನೇಶ್ ಕಾರ್ತಿಕ್ ತಂಡಕ್ಕೆ ವಾಪಸಾಗಿದ್ದಾರೆ. ಈಗ ನಡೆಯುತ್ತಿರುವ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ನಾಯಕನಾಗಿ ಮುನ್ನಡೆಸುತ್ತಿರುವ ಹಾರ್ದಿಕ್ ಪಾಂಡ್ಯ ತಂಡದಲ್ಲಿ ಮತ್ತೆ ಸ್ಥಾನ ಪಡೆದಿದ್ದಾರೆ. 2021ರಲ್ಲಿ ಯುಎಇನಲ್ಲಿ ನಡೆದಿದ್ದ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಕೊನೆಯ ಬಾರಿ ಭಾರತದ ಪರ ಆಡಿದ್ದರು.

ಈ ವರ್ಷದ ಐಪಿಎಲ್‌ನಲ್ಲಿ ಗರಿಷ್ಠ ವಿಕೆಟ್ ಪಡೆದಿರುವ ಯಜುವೇಂದ್ರ ಚಹಾಲ್ ಹಾಗೂ ಕುಲ್‌ದೀಪ್ ಯಾದವ್ ತಂಡದಲ್ಲಿದ್ದಾರೆ. ಪಂಜಾಬ್ ಕಿಂಗ್ಸ್ ವೇಗದ ಬೌಲರ್ ಅರ್ಷದೀಪ್ ಸಿಂಗ್ ಕೂಡ ಟ್ವೆಂಟಿ-20ಯಲ್ಲಿ ಸ್ಥಾನ ಪಡೆದಿದ್ದಾರೆ.

ಅದೇ ರೀತಿ ಮರು ನಿಗದಿಯಾಗಿರುವ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಚೇತೇಶ್ವರ ಪೂಜಾರ ಸೇರಿದಂತೆ ಹಿರಿಯ ಆಟಗಾರರು ವಾಪಸಾಗಿದ್ದಾರೆ. ವಿಕೆಟ್‌ಕೀಪರ್ ಕೆ.ಎಸ್.  ಭರತ್ ಅವರು ರಿಷಭ್ ಪಂತ್ ಸಹಾಯಕನಾಗಿ ಆಯ್ಕೆಯಾಗಿದ್ದಾರೆ. ಜಸ್‌ಪ್ರೀತ್ ಬುಮ್ರಾ, ಮುಹಮ್ಮದ್ ಶಮಿ, ಉಮೇಶ್ ಯಾದವ್, ಮುಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ ಕೃಷ್ಣ ವೇಗದ ಬೌಲಿಂಗ್ ವಿಭಾಗದಲ್ಲಿದ್ದಾರೆ. ಆರ್.ಅಶ್ವಿನ್ ಹಾಗೂ ರವೀಂದ್ರ ಜಡೇಜ ಸ್ಪಿನ್ ವಿಭಾಗದಲ್ಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಟ್ವೆಂಟಿ-20 ಸರಣಿಗೆ ಭಾರತ ತಂಡ: ಕೆ.ಎಲ್.ರಾಹುಲ್(ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ಉಪ ನಾಯಕ, ವಿಕೆಟ್‌ಕೀಪರ್), ದಿನೇಶ್ ಕಾರ್ತಿಕ್( ವಿಕೆಟ್‌ಕೀಪರ್),ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್ , ಯಜುವೇಂದ್ರ ಚಹಾಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅವೇಶ್‌ಖಾನ್, ಅರ್ಶದೀಪ್ ಸಿಂಗ್ ಹಾಗೂ ಉಮ್ರಾನ್ ಮಲಿಕ್.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)