ಮುಲ್ಕಿ; ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ: ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು
ಮನೀಶ್
ಮುಲ್ಕಿ, ಜೂ.25: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶನಿವಾರ ರಾತ್ರಿ ವರದಿಯಾಗಿದೆ.
ಮೃತರನ್ನು ಮುಲ್ಕಿ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ ಕೊಳಕಾಡಿ ನಿವಾಸಿ ಮನೀಶ್ ಎಂದು ಗುರುತಿಸಲಾಗಿದೆ. ಇವರು ಅಂತಿಮ ವರ್ಷದ ಬಿಸಿಎ ವ್ಯಾಸಾಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನೊಂದು ಬೈಕ್ ನಲ್ಲಿದ್ದ ಅದೇ ಕಾಲೇಜಿನ ದೀಕ್ಷಿತ್ ಎಂಬವರು ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ತೀವ್ರತೆಗೆ ಮನೀಷ್ ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ದೀಕ್ಷಿತ್ ಅವರ ಕಾಲಿಗೆ ಗಾಯವಾಗಿರುವ ಬಗ್ಗೆ ವರದಿಯಾಗಿದೆ. ಅಪಘಾತಕ್ಕೆ ಇಬ್ಬರೂ ಅತೀ ವೇಗದಿಂದ ಬೈಕ್ ಚಲಾಯಿಸಿದ್ದೇ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆ ಸಂಬಂಧ ಉತ್ತರ ವಲಯ ಸಂಚಾರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.