ಬೆಂಗಳೂರು
''ರೌಡಿಸಂ ಮತ್ತು ಡ್ರಗ್ಸ್ ಮುಕ್ತ ಬೆಂಗಳೂರು ನಮ್ಮ ಗುರಿ''
ಠಾಣೆಗಳಲ್ಲಿ ಎಲ್ಲ ಮಾದರಿಯ ದೂರು ಸ್ವೀಕರಿಸಬೇಕು: ಡಿಜಿಪಿ ಅಲೋಕ್ ಮೋಹನ್ ಸೂಚನೆ

ಬೆಂಗಳೂರು, ಮೇ 25: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರು ನೀಡುವ ಎಲ್ಲ ಮಾದರಿಯ ದೂರುಗಳನ್ನು ಸ್ವೀಕಾರ ಮಾಡಬೇಕು. ಇಲ್ಲದಿದ್ದರೆ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ನಗರ ಪೊಲೀಸ್ ಕಮೀಷನರ್ ಕಚೇರಿಗೆ ಭೇಟಿ ಅಧಿಕಾರಿಗಳ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಮಹಿಳೆ ಹಾಗೂ ಮಕ್ಕಳ ಸುರಕ್ಷತೆ, ಸೈಬರ್ ಕ್ರೈಂಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದರು.
‘ಇನ್ನು ಪೊಲೀಸ್ ಸಿಬ್ಬಂದಿಗಳಿಗೆ ಹೆಚ್ಚಿನ ತಾಂತ್ರಿಕ ತರಬೇತಿ ನೀಡಲಾಗುವುದು. ನಗರ ಪ್ರದೇಶಗಳಲ್ಲಿ ಟ್ರಾಫಿಕ್ ನಿರ್ವಹಣೆ ಕೂಡ ಮುಖ್ಯವಾಗಿದ್ದು, ಎಲ್ಲಿಯೂ ಸಂಚಾರ ದಟ್ಟಣೆ ಆಗದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಹೆಚ್ಚು ಗಮನ ಹರಿಸಲಾಗುವುದು’ ಎಂದು ಅಲೋಕ್ ಮೋಹನ್ ಹೇಳಿದರು.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ರೌಡಿಸಂ ಮತ್ತು ಡ್ರಗ್ಸ್ ಮುಕ್ತವಾಗಿಸಲು ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು. ಇನ್ನು ಜನಸಾಮಾನ್ಯರೊಂದಿಗೆ ಪೊಲೀಸರು ಉತ್ತಮ ವರ್ತನೆ ತೋರುವುದು ಕಡ್ಡಾಯವಾಗಬೇಕೆಂದು ನಿರ್ದೇಶಿಸಲಾಗಿದ್ದು, ಜನಸ್ನೇಹಿ ಪೊಲೀಸ್ ಆಗುವ ಕಡೆಗೆ ಒತ್ತು ನೀಡಲಾಗುತ್ತದೆ. ಅಲ್ಲದೆ ನಗರದಲ್ಲಿ ನಡೆಯುವ ಯಾವುದೇ ಅಕ್ರಮ ಚಟುವಟಿಕೆಗಳನ್ನು ಸಹಿಸುವುದಿಲ್ಲ ಎಂದು ಅಲೋಕ್ ಮೋಹನ್ ತಿಳಿಸಿದರು.
ರಾಜ್ಯಾದ್ಯಂತ ಪೊಲೀಸರ ದೈಹಿಕ ಸಾಮರ್ಥ್ಯದ ಬಗ್ಗೆಯೂ ಗಮನ ಹರಿಸಲಾಗುವುದು. ಅವರು ದೈಹಿಕವಾಗಿ ಸಧೃಡರಾಗಿರುವಂತೆ ಕ್ರಮ ಕೈಗೊಳ್ಳಲಾಗುವುದು. ಎಲ್ಲ ಹಿರಿಯ ಅಧಿಕಾರಿಗಳಿಗೂ ಪ್ರಕರಣಗಳ ಬಗ್ಗೆ ಕಾಲ ಕಾಲಕ್ಕೂ ಪರಿಶೀಲನೆ ಮಾಡಲು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಪೊಲೀಸರ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ ಎಂದು ಅಲೋಕ್ ಮೋಹನ್ ಹೇಳಿದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ