varthabharthi

ಮಳೆಯ ಆರ್ಭಟ: ಕರಾವಳಿ, ಮಲೆನಾಡು ತತ್ತರ

ರಾಜ್ಯಾದ್ಯಂತ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಮಲೆನಾಡಾದ ಚಿಕ್ಕಮಗಳೂರಿನಲ್ಲಿ ನಿರಂತರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ವಿದ್ಯುತ್ ಸಂಪರ್ಕ ಕಡಿದುಹೋಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲೂ ವರುಣ ಆರ್ಭಟಿಸಿದ್ದು ಬೆಳಗಾವಿಯಲ್ಲಿ ನದಿ, ಕಾಲುವೆಗಳು ಉಕ್ಕಿಹರಿಯುತ್ತಿದ್ದು, ನೆರೆ ಭೀತಿ ತಲೆದೋರಿದೆ. ಸೋಮವಾರ ಚಾರ್ಮಾಡಿ ಘಾಟ್‌ನಲ್ಲಿ ನಿರಂತರ ಮಳೆಯಿಂದಾಗಿ ಗುಡ್ಡ ಕುಸಿತ ಸಂಭವಿಸಿತ್ತು. ಮಂಗಳವಾರವೂ ಮಳೆ ಮುಂದುವರಿದಿದ್ದು, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಣಕಲ್‌ನಲ್ಲಿ ಕುಂಭದ್ರೋಣ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಬಹುತೇಕ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಕೆಲವೆಡೆ ಗಾಳಿ ಮಳೆಯಿಂದ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.

Comments (Click here to Expand)